ಪ್ರಧಾನಿ ಮೋದಿಯನ್ನು ಹೊಗಳಿದ್ದಕ್ಕೆ ಪಾಕಿಸ್ತಾನದಲ್ಲಿ ಇಮ್ರಾನ್‌ ಖಾನ್‌ ಮೇಲೆ ದಾಳಿ: ನಳಿನ್‍ ಕುಮಾರ್ ಕಟೀಲ್

Update: 2022-11-04 14:30 GMT

ಮಂಡ್ಯ: 'ಪ್ರಧಾನಿ ನರೇಂದ್ರ ಮೋದಿಯನ್ನು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹೊಗಳಿದ್ದರು. ಹಾಗಾಗಿ ಅವರ ಮೇಲೆ ಮೇಲೆ ಗುಂಡಿನ ದಾಳಿ ನಡಿದಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಹೇಳಿದ್ದಾರೆ. 

ಶುಕ್ರವಾರ ಶ್ರೀರಂಗಪಟ್ಟಣ ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಕಲ್ಪ ಯಾತ್ರೆಯ ಸಭೆ ನಡೆಸಿ ಮಾತನಾಡಿದ ಅವರು, 'ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದ ಜನಪರ ಯೋಜನೆಗಳ ಪರಿಣಾಮ ಜನತೆ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ' ಎಂದು ಹೇಳಿದರು.

'ಹೊರ ಹೋದವರನ್ನು ಮತ್ತೆ ಪಕ್ಷಕ್ಕೆ ಕರೆಯುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ಅವರು ಮತ್ತೆ ಪಕ್ಷಕ್ಕೆ ಆಹ್ವಾನಿಸುತ್ತಿದ್ದಾರೆ. ಇದು ಕಾಂಗ್ರೆಸ್ ಎಂತಹ ಸ್ಥಿತಿಗೆ ತಲುಪಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವ ಜೆಡಿಎಸ್‍ನ್ನು ಜನತೆ ತಿರಸ್ಕರಿಸಲು ತೀರ್ಮಾನಿಸಿದ್ದಾರೆ' ಎಂದು ಅವರು ಟೀಕಿಸಿದರು.

ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಗೆ ವಿಫಲ ಯತ್ನ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ, 'ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತದಿಂದ ರಾಜ್ಯ ಪ್ರಗತಿಯನ್ನು ಕಾಣುತ್ತಿದೆ. ಮಂಡ್ಯ ಜಿಲ್ಲೆಯಲ್ಲೂ ಬಿಜೆಪಿ ಸಂಘಟಿತವಾಗಿ ಬೆಳೆದಿದೆ' ಎಂದರು.

ಮಾಜಿ ಸಚಿವ ಬಿ.ಸೋಮಶೇಖರ್, ಜಿಲ್ಲಾ ಉಸ್ತುವಾರಿ ಜಗದೀಶ್ ಹಿರೇಮನಿ, ಮುನಿರಾಜೇಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಮಹೇಶ್, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಜಿಪಂ ಮಾಜಿ ಸದಸ್ಯ ಚಂದಗಾಲು ಶಿವಣ್ಣ, ಡಾ.ಸಿದ್ದರಾಮಯ್ಯ, ಅಶೋಕ್ ಎಸ್.ಡಿ.ಜಯರಾಂ, ವಿದ್ಯಾನಾಗೇಂದ್ರ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

Similar News