ಕಳಸ: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ನಾಗರಿಕರು

Update: 2022-11-06 17:30 GMT

ಕಳಸ: ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಸೆಳೆಯುವ ನಿಟ್ಟಿನಲ್ಲಿ ನಾಗರಿಕರು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದು, ರಸ್ತೆ ದೂಳಿನಿಂದಾಗುತ್ತಿರುವ ಸಮಸ್ಯೆಗಳನ್ನು ವ್ಯಂಗ್ಯ ಚಿತ್ರಗಳ ಮೂಲಕ ಬಿಂಬಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕಳಸ ಪಟ್ಟಣದ ಮುಖ್ಯ ರಸ್ತೆ ಹಾಗೂ ಹೊರನಾಡು ರಸ್ತೆ ಸಂಪೂರ್ಣವಾಗಿ ಹೊಂಡಗುಂಡಿಗಳಿಂದ ಹದಗೆಟ್ಟಿದ್ದು, ರಸ್ತೆಗಳಲ್ಲಿ ವಾಹನಗಳು ಸಂಚರಿಸುವ ವೇಳೆ ಭಾರೀ ಧೂಳು ಎದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕರು ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರು ರಸ್ತೆ ದುರಸ್ತಿಗೆ ಆಗ್ರಹಿಸಿ ಅಧಿಕಾರಿಗಳ ಗಮನಸೆಳೆಯಲು ವ್ಯಂಗ್ಯ ಚಿತ್ರಗಳನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.

ಈ ವ್ಯಂಗ್ಯ ಚಿತ್ರಗಳು ರಸ್ತೆ ಅವ್ಯವಸ್ಥೆಯಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ಬಿಂಬಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಳಸ ಪಟ್ಟಣದ ರಸ್ತೆ ಅವ್ಯವಸ್ಥೆ ಬಗೆಗಿನ ವ್ಯಂಗ್ಯ ಚಿತ್ರಗಳು ವ್ಯಾಪಕವಾಗಿ ವೈರಲ್ ಆಗುತ್ತಿರುವುದರಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಮುಜುಗರಕ್ಕೂ ಅನುಭವಿಸುವಂತಾಗಿದೆ.

Similar News