×
Ad

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ: ಯಡಿಯೂರಪ್ಪ

Update: 2022-11-08 19:07 IST

ಉಡುಪಿ : ಕರ್ನಾಟಕದಲ್ಲಿ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯನ್ನು  ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಎರಡು ದಿನಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದ ಯಡಿಯೂರಪ್ಪ ಗದಗಕ್ಕೆ ಪ್ರಯಾಣ ಬೆಳೆಸುವ ಮುನ್ನ ಇಂದು ಬೆಳಗ್ಗೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ತನ್ನನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯ ಯಾವುದೊ ಭ್ರಮೆಯಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ, ಆದರೆ ನೀವು ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಬಾದಾಮಿಯಲ್ಲಿ ನಿಂತರೆ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಎಂದು ಭವಿಷ್ಯ ನುಡಿದರು.

ಬೇರೆ ಬೇರೆ ಪಕ್ಷಗಳಿಂದ ಅನೇಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ ಇನ್ನೂ ಬರುವವರಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಜಾರಕಿಹೋಳಿ ಹೇಳಿಕೆಗೆ ಖಂಡನೆ: ಹಿಂದೂ ಪದದ ಕುರಿತು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೋಳಿ ನೀಡಿರುವ ಹೇಳಿಕೆ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿದ್ದು, ಇದು ಖಂಡನೀಯ. ಕಾಂಗ್ರೆಸ್‌ನವರು ಇದನ್ನು ಖಂಡಿಸಿದ್ದಾರೆ. ಆದರೆ ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದರು.

ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಸತೀಶ್ ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದುಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ತಿಳಿಸಿದರು.

Similar News