'ಹಿಂದೂ' ಪದದ ಬಗ್ಗೆ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಆಕ್ರೋಶ, ದೂರು

Update: 2022-11-09 12:22 GMT

ಬೆಂಗಳೂರು, ನ. 9: ಹಿಂದೂ ಪದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ಖಂಡಿಸಿ ರಾಜ್ಯದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ, ಪ್ರತಿಕೃತಿ ಸಹಿಸಿ ಆಕ್ರೋಶ ಹೊರಹಾಕಿದರು.

ಬುಧವಾರ ರಾಜಧಾನಿ ಬೆಂಗಳೂರು, ಬೆಳಗಾವಿ, ಕೊಪ್ಪಳ, ಕೋಲಾರ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ವಿವಿಧೆಡೆ ಜಿಲ್ಲಾ ಕೇಂದ್ರಗಳಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಮಾನವ ಸರಪಳಿನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದಲ್ಲದೆ, ಸತೀಶ್ ಜಾರಕಿಹೊಳಿ ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ವಿವಿಧ ಭಾಗಗಳಲ್ಲಿ ಕೆಲಕಾಲ ರಸ್ತೆತಡೆ ನಡೆಸಿದ ಕಾರ್ಯಕರ್ತರು, ಸತೀಶ್ ಜಾರಕಿಹೊಳಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ಸತೀಶ್ ಜಾರಕಿಹೊಳಿ ಅವರು ಹಿಂದೂಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹಿಂದೂ ಪದದ ಅವಹೇಳನ ಮಾಡಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸತೀಶ್ ಜಾರಕಿಹೊಳಿ ವಿರುದ್ಧ ಘೊಷಣೆಗಳನ್ನು ಕೂಗಿದರು. ಬಹುಸಂಖ್ಯಾತ ಹಿಂದೂ ಧರ್ಮೀಯರ ಆಚರಣೆ, ಭಾವನೆಗಳಿಗೆ ಪದೇ ಪದೇ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಕೆಲ ರಾಜಕಾರಣಿಗಳು ತಮ್ಮ ನಾಲಿಗೆ ಬಿಗಿಹಿಡಿಯಬೇಕು. ಸತೀಶ್ ಜಾರಕಿಹೊಳಿ ಅವರು ಕೂಡಲೇ ಹಿಂದೂ ಸಮಾಜವನ್ನು ಕ್ಷಮೆ ಕೇಳಬೇಕು. ಇಲ್ಲವಾದರೆ ಪ್ರತಿಭಟನೆ ಮುಂದುವರೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

► ದೂರು ನೀಡಿದ ಬಿಜೆಪಿ

ಕೊಪ್ಪಳದ ಅಶೋಕ ವೃತ್ತದಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು, ಧರ್ಮದ ಭಾವನೆಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕುಕೊಪ್ಪಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.

Full View

Similar News