ಸಾವರ್ಕರ್ ವಿರುದ್ಧ ಟೀಕೆ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಮೊಮ್ಮಗ ರಂಜಿತ್ ಸಾವರ್ಕರ್
ಮುಂಬೈ: ವಿವಾದಿತ ಹಿಂದುತ್ವವಾದಿ ನಾಯಕ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾವರ್ಕರ್‌ಗೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರ ವಿರುದ್ಧವೂ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅದಾಗ್ಯೂ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. "ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್, ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡು ಟೀಕೆಗಳನ್ನು ಮಾಡಿದ್ದು, ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದಾರೆ, ಆ ಮೂಲಕ ಸ್ವಾತಂತ್ರ್ಯ ಸೇನಾನಿಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದರು. ಅಲ್ಲದೆ, ಸಾವರ್ಕರ್ ಬರೆದಿದ್ದಾರೆ ಎನ್ನಲಾದ ಕ್ಷಮಾಪಣಾ ಪತ್ರವನ್ನೂ ಮಾಧ್ಯಮಗಳಿಗೆ ತೋರಿಸಿದ್ದರು.