ಮಕ್ಕಳ ಕ್ರಿಯಾಶೀಲತೆ ನಿಯಂತ್ರಿಸಬಾರದು: ವಿಶ್ವೇಶ್ವರ ಹೆಗಡೆ ಕಾಗೇರಿ

Update: 2022-11-20 16:38 GMT

ಮಂಗಳೂರು: ಶಿಸ್ತಿನ ಹೆಸರಿನಲ್ಲಿ ಮಕ್ಕಳ ಕ್ರಿಯಾಶೀಲತೆಯನ್ನು ನಿಯಂತ್ರಿಸುವ ಯತ್ನ ನಡೆಯುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಯಾವ ಕಾರಣಕ್ಕೂ ಮಕ್ಕಳ ಕ್ರಿಯಾಶೀಲತೆಯನ್ನು ನಿಯಂತ್ರಿಸಬಾರದು. ಮುಗ್ಧ ಮಕ್ಕಳ ಮನಸ್ಸನ್ನು ಹೇಗೆ ಬೆಳೆಸಬೇಕು ಎಂಬುದರ ಬಗ್ಗೆ ಜವಾಬ್ದಾರಿಯುತವಾಗಿ ಯೋಚಿಸುವ ಅಗತ್ಯವಿದೆ ಎಂದು ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನಗರದ ಸಂಘನಿಕೇತನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕನ್ನಡ ಶಾಲಾ ಮಕ್ಕಳ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ರವಿವಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳು ಮಕ್ಕಳ ಕ್ರಿಯಾಶೀಲತೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಸರಕಾರಿ ಶಾಲೆಗಳಲ್ಲಿ ಕಲಿತ ಅನೇಕರು ಮಹಾನ್ ಸಾಧನೆ ಮಾಡಿದ್ದಾರೆ. ಸರಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರಕಾರಿ ಶಾಲೆಯ ಬಗ್ಗೆ ಹೆಚ್ಚಿನವರಲ್ಲಿ ಕೀಳರಿಮೆ ಇದೆ. ಇದರಿಂದ ಪ್ರತಿಯೊಬ್ಬರೂ ಹೊರಬಂದು ಕ್ರಿಯಾಶೀಲರಾಗಬೇಕಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕರ್ಣಾಟಕ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಂಗಳೂರು ಇದರ ಅಧ್ಯಕ್ಷ ಡಾ. ವಾಮನ ಶೆಣೈ ಉಪಸ್ಥಿತರಿದ್ದರು.
ಕೇಶವ ಬಂಗೇರ ಸ್ವಾಗತಿಸಿದರು. ಅಕ್ಷತಾ ರೈ ನಿರೂಪಿಸಿದರು. ಸ್ಮಿತಾ ವಂದಿಸಿದರು.

Similar News