ರಮೇಶ್ ಕುಮಾರ್ ರಿಗೆ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ: ಕುಮಾರಸ್ವಾಮಿ

ಮಾಜಿ ಸ್ಪೀಕರ್ ಬಗ್ಗೆ ಅವಾಚ್ಯ ಪದ ಬಳಕೆ: ಆರೋಪ

Update: 2022-11-23 08:16 GMT

ಬೆಂಗಳೂರು, ನ.23: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ಅವಾಚ್ಯ ಪದ ಬಳಕೆ ನೋವುಂಟು ಮಾಡಿದೆ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ" ಎಂದು ತಿಳಿಸಿದ್ದಾರೆ.

"ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ  ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ" ಎಂದು ಹೇಳಿದ್ದಾರೆ.

 ಹಿನ್ನೆಲೆ:

ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಗುತ್ತಿದೆ. ಮಂಗಳವಾರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಹಾಗೂ ಮಾಸ್ತೇನಹಳ್ಳಿ ಗ್ರಾಮಕ್ಕೆ ರಥಯಾತ್ರೆ ತಲುಪಿದಾಗ ಸ್ಥಳೀಯ ಸರಕಾರಿ ಶಾಲೆಯ ನೂರಾರು ಮಕ್ಕಳು ಪ್ರತಿಭಟನೆ ನಡೆಸಿದರು. ಈ ವೇಳೆ ಕುಮಾರಸ್ವಾಮಿ ಅವರ ಅಹವಾಲು ಆಲಿಸಿದರು. ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಪಾಠ ಕೇಳಲು ಕಷ್ಟವಾಗುತ್ತಿದೆ ಎಂದು ಮಕ್ಕಳು ಅಳಲು ತೋಡಿಕೊಂಡರು. ಈ ಹಿನ್ನೆಲೆಯಲ್ಲಿ ಮಕ್ಕಳ ಜೊತೆಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಿಸಿದ ಕುಮಾರಸ್ವಾಮಿ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಲ್ಲಿಂದ ಹಿಂದಿರುಗಿ ಕಾರನ್ನೇರುತ್ತಿದ್ದಂತೆ ಅದರಲ್ಲಿದ್ದವರಲ್ಲಿ ಮಾತನಾಡುವ ವೇಳೆ  ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಇದರ ವೀಡಿಯೊ ವೈರಲ್ ಆಗಿತ್ತು.

ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಆ ಬಗ್ಗೆ ವಿಷಾದ ವ್ಯಕ್ತಪಡಿಸಿ, ಮಾತನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.

Similar News