ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ನೀಡಿದ ಕೋರ್ಟ್

Update: 2022-11-24 11:59 GMT

ಬೆಂಗಳೂರು, ನ.24: ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಅವರು ದಾಖಲಿಸಿರುವ ಕೇಸ್‍ಗೆ ಸಂಬಂಧಿಸಿದಂತೆ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. 

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಸುಧಾಕರ್‍ರವರ ನೇಮಕವನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿಯವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ಆಗ ಶಾಸಕರಾಗಿದ್ದ ಸುಧಾಕರ್ ಅವರು ರೈತರಿಗೆ ಕಳ್ಳಭಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ತನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದು ತಮ್ಮ ತೇಜೋವಧೆ ಎಂದು ಆಂಜನೇಯರೆಡ್ಡಿ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು. 

ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಆಧಾರದಲ್ಲಿ ಆಂಜನೇಯರೆಡ್ಡಿ ಅವರು ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. 

Similar News