ಚುನಾವಣಾ ಪೂರ್ವ ಸಿದ್ಧತೆಗೆ ಕಾರ್ಯಕರ್ತರಿಗೆ ಕುಯಿಲಾಡಿ ಕರೆ

Update: 2022-11-29 16:23 GMT

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಜೊತೆಗೆ ವಿವಿಧ ಹಂತದ ಸಭೆಗಳು, ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಮುಂತಾದ ಪ್ರಮುಖ ತುರ್ತು ಕೆಲಸ ಕಾರ್ಯಗಳೊಂದಿಗೆ ಚುನಾವಣಾ ಪೂರ್ವ ಸಿದ್ಧತೆಗೆ ಬದ್ಧತೆಯಿಂದ ಸಕ್ರಿಯ ವಾಗಿ ತೊಡಗಿಸಿಕೊಳ್ಳುವಂತೆ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದ್ದಾರೆ.

ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಉಡುಪಿ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯಲ್ಲಿ ಅಪೇಕ್ಷಿತರು ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಹಾಗೂ ಸಿದ್ಧತೆಗಳನ್ನು ನಡೆಸಬೇಕು ಎಂದರು.

ಡಿ.8ರೊಳಗೆ ಎಲ್ಲಾ ಮಂಡಲಗಳ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಡಿ.15ರೊಳಗೆ ಎಲ್ಲಾ ಮೋರ್ಚಾಗಳ ಪ್ರಶಿಕ್ಷಣ ವರ್ಗವನ್ನು ನಡೆಸಬೇಕು. ಡಿ.೮ ರೊಳಗೆ ಮತದಾರರ ಪಟ್ಟಿಯ ಪರಿಣಾಮಕಾರಿ ಪರಿಷ್ಕರಣೆ ನಡೆಸುವ ನಿಟ್ಟಿನಲ್ಲಿ ಡಿ.3ಮತ್ತು 4ರಂದು ಜಿಲ್ಲೆಯಾದ್ಯಂತ ಮತದಾರರ ಹೆಸರು ನೊಂದಾವಣೆ ಮತ್ತು ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಮಂಡಲವಾರು ಶಕ್ತಿ ಕೇಂದ್ರಗಳ ಸಭೆಗಳು ಮುಗಿದ ತಕ್ಷಣ ಜನವರಿ ತಿಂಗಳಲ್ಲಿ ಜಿಲ್ಲೆಯ ಎಲ್ಲಾ 1,111 ಬೂತ್‌ಗಳಲ್ಲಿ ಬೂತ್ ಅಧ್ಯಕ್ಷರ ನೇತೃತ್ವದಲ್ಲಿ ಫಲಾನುಭವಿಗಳ ಸಭೆಗಳನ್ನು ನಡೆಸಿ ಸರಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳ ಮಾಹಿತಿ ನೀಡಿ ವಿಚಾರ ವಿನಿಮಯ ನಡೆಸಲಾಗುವುದು ಎಂದು ಕುಯಿಲಾಡಿ ನುಡಿದರು.

ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಮಾತನಾಡಿ ಬಿಜೆಪಿ ಎಂದಿಗೂ ತನ್ನ ವಿಚಾರಧಾರೆ ಮತ್ತು ಕಾರ್ಯ ಪದ್ಧತಿಯಲ್ಲಿ ಯಾವುದೇ ರಾಜಿಮಾಡಿಕೊಂಡಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ದಾಖಲೆಯ ಅಭಿವೃದ್ಧಿ ಯೋಜನೆಗಳು ಕಾರ್ಯಗತವಾಗಿವೆ. ಮುಂದಿನ ವಿಧಾನಸಭಾ ಚುನಾವಣಾ ವಾತಾವರಣ ಬಿಜೆಪಿ ಪರವಾಗಿದೆ. ಬೂತ್ ಗೆದ್ದರೆ ದೇಶ ಗೆದ್ದಂತೆ. ಪಕ್ಷದ ಚಿಹ್ನೆಯನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಿರಬೇಕು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಮತದಾರ ಪಟ್ಟಿಯ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಪಾಧ್ಯಕ್ಷರಾದ ರವಿಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್,  ಅಂಡಾರು ದೇವಿ ಪ್ರಸಾದ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Similar News