ರಾಜ್ಯದ 221 ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಅವಕಾಶ

Update: 2022-11-30 16:39 GMT

ಬೆಂಗಳೂರು, ನ.30: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಒಂದು ತಿಂಗಳ ಅವಕಾಶ ನೀಡಲಾಗಿದ್ದು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮತದಾರರು ತಪ್ಪದೇ ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮನವಿ ಮಾಡಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಜಿಲ್ಲೆಯ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ಹೊರತುಪಡಿಸಿ ಉಳಿದ 221 ಕ್ಷೇತ್ರಗಳಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.8ರವರೆಗೂ ಅವಧಿ ಇದೆ. ಅದೇ ರೀತಿ, ಡಿ.3ರಿಂದ ಎರಡು ದಿನಗಳ ಕಾಲ ಮತದಾರರ ಕುರಿತು ವಿಶೇಷ ಪ್ರಚಾರದ ಕಾರ್ಯಕ್ರಮಗಳು ನಡೆಯಲಿವೆ. ಡಿ.26ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆದರೆ, ಮುಂದಿನ ವಾರ್ಷಿಕ ಸಾಲಿನ ಜ.5ರಂದು ಮತದಾರರ ಪಟ್ಟಿಯ ಅಂತಿಮ ಪ್ರಕರಣ ಹೊರಬೀಳಲಿದೆ.

ಒಟ್ಟಿನಲ್ಲಿ ಮತದಾರರು ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ ಮತ್ತೆ ಸೇರ್ಪಡೆ ಮಾಡಿಸಿಕೊಳ್ಳಬಹುದು. ಮೊಬೈಲ್ ಸಂಖ್ಯೆ ಬದಲಾವಣೆ, ವಿಳಾಸ ಬದಲಾವಣೆ, ತಿದ್ದುಪಡಿಗೆ 1 ತಿಂಗಳ ಅವಕಾಶ ನೀಡಲಾಗಿದೆ. ಈ ಕುರಿತು ಬಿಎಲ್‍ಒ ಗಳಿಗೆ ನಿಗದಿತ ಅರ್ಜಿ ಸಲ್ಲಿಸಬೇಕು.

ಇನ್ನೂ, ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತು www.ceokarnataka.com ನಲ್ಲಿ ನೋಡಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Similar News