ಚಿಲುಮೆ ಸಂಸ್ಥೆ ಹಗರಣ: ಮತ್ತಿಬ್ಬರು ವಶಕ್ಕೆ

Update: 2022-11-30 16:44 GMT

ಬೆಂಗಳೂರು, ನ.30: ಮತದಾರರ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಇಲ್ಲಿನ ಹಲಸೂರು ಗೇಟ್ ಠಾಣಾ ಪೊಲೀಸರು, ಚಿಲುಮೆ ಸಂಸ್ಥೆಯೊಂದಿಗೆ ಕೈಜೋಡಿಸಿದ್ದ ಆರೋಪದಡಿ ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಹೊರವಲಯದಲ್ಲಿ ತಲೆಮರೆಸಿಕೊಂಡಿದ್ದ ಮಾರುತಿ ಗೌಡ ಮತ್ತು ಅಭಿಷೇಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಇಬ್ಬರು ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಗೆ ಆಪ್ತರಾಗಿದ್ದು, ಆನ್‍ಲೈನ್ ಡೇಟಾ ಸಂಗ್ರಹದಲ್ಲಿ ಸಹಾಯ ಮಾಡಿದ್ದರು. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇಬ್ಬರೂ ತಲೆಮರೆಸಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ ಇತರೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ಅಮಾನತು ಐಎಎಸ್‍ಗಳ ವಿಚಾರಣೆ

ಅಮಾನತಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ಅಮಾನತಾಗಿದ್ದ ಬಿಬಿಎಂಪಿ ಆಡಳಿತ ಮತ್ತು ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್‍ಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Similar News