ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು: ವರದಿ ಸಲ್ಲಿಸಲು ರಾಜ್ಯ ಸರಕಾರ, ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Update: 2022-12-01 17:09 GMT

ಬೆಂಗಳೂರು, ಡಿ.1: ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಿರುವ ಹಾಗೂ ತೆರವಿಗೆ ಕ್ರಮಕ್ಕೆ ಮುಂದಾಗಿರುವ ಮಾಹಿತಿವುಳ್ಳ ಸಮರ್ಪಕ ವಸ್ತುಸ್ಥಿತಿ ವರದಿಯನ್ನು ಮೂರು ವಾರದಲ್ಲಿ ಸಲ್ಲಿಸಬೇಕೆಂದು ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಪಾಲಿಸುವುದಕ್ಕಾಗಿ ಉಚ್ಚ ನ್ಯಾಯಾಲಯ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ. 

ನಗರದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಚರಣೆ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಮಾಣ ಪತ್ರ ಸಲ್ಲಿಸಬೇಕು. ಹಾಗೆಯೇ ಸರಕಾರ ಸಹ ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿ. ವಿಚಾರಣೆಯನ್ನು ಮುಂದೂಡಿತು.

ರಸ್ತೆ, ಉದ್ಯಾನವನ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವಂತೆ 2009ರ ಫೆ. 16ರಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿತ್ತು. 

Similar News