ಲಂಚ ಪ್ರಕರಣ: ಕಾರ್ಖಾನೆಗಳ ಸಹಾಯಕ ನಿರ್ದೇಶಕ ಎಚ್. ಸುರೇಶ್‌ಗೆ 4 ವರ್ಷ ಜೈಲು ಶಿಕ್ಷೆ, ದಂಡ

Update: 2022-12-03 13:23 GMT

ಮಂಗಳೂರು, ಡಿ.3: ಕಾರ್ಖಾನೆಗಳ ಮಾಲಕರಿಂದ ಲಂಚ ಪಡೆದ ಪ್ರಕರಣದಲ್ಲಿ ಕಾರ್ಖಾನೆಗಳ ಸಹಾಯಕ ನಿರ್ದೇಶಕನಿಗೆ ಮಂಗಳೂರು ನ್ಯಾಯಾಲಯ ಶನಿವಾರ ಶಿಕ್ಷೆ ವಿಧಿಸಿದೆ.

ನಗರದ ಕೊಟ್ಟಾರದಲ್ಲಿರುವ ಕಾರ್ಖಾನೆಗಳ ಸಹಾಯಕ ನಿರ್ದೇಶಕರ ಕಚೇರಿ ಉಪವಿಭಾಗ-2ರಲ್ಲಿ ಕಾರ್ಖಾನೆಗಳ ಸಹಾಯಕ ನಿರ್ದೇಶಕನಾಗಿದ್ದ ಪ್ರಸ್ತುತ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಸುರೇಶ್ ಶಿಕ್ಷೆಗೊಳಗಾದ ಆರೋಪಿ.

ಮಂಗಳೂರಿನಲ್ಲಿ ಕರ್ತವ್ಯದಲ್ಲಿದ್ದಾಗ ಕಾರ್ಖಾನೆಗಳ ಪರವಾನಿಗೆ ನೀಡುವುದು, ಪರವಾನಿಗೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡುವುದು ಇತ್ಯಾದಿ ಕೆಲಸಗಳನ್ನು ನಿರ್ವಹಿಸಲು ಕಾರ್ಖಾನೆಗಳ ಮಾಲಕರಿಂದ ಲಂಚ ಪಡೆಯುತ್ತಿದ್ದ ಬಗ್ಗೆ ಬಂದ ದೂರಿನಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು 2016ರ ನ.30ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಈ ವೇಳೆ 3,49, 515 ರೂ. ವನ್ನು ವಶಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಡಿ.3ರಂದು ಆರೋಪಿ ಎಚ್.ಸುರೇಶ್‌ಗೆ 4 ವರ್ಷಗಳ ಸಾದಾ ಸಜೆ ಹಾಗೂ 4 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಎಸಿಬಿ ಮಂಗಳೂರು ಪೊಲೀಸ್ ಠಾಣೆಯ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

Similar News