ಮಂಗಳೂರು : 18 ವರ್ಷ ತುಂಬಿದವರು ಹಕ್ಕು ಚಲಾಯಿಸಲು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕರೆ

Update: 2022-12-05 13:56 GMT

ಮಂಗಳೂರು, ಡಿ.5: ಈ ಬಾರಿಯ ಚುನಾವಣೆಯಲ್ಲಿ 18 ವರ್ಷ ಪೂರೈಸಿದ ಮಂಗಳಮಖಿಯರು ತಮ್ಮ ಹಕ್ಕನ್ನು ಚಲಾಯಿಸುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕರೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳಮುಖಿಯರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಚುನಾವಣಾ ಆಯೋಗವು ಈ ಬಾರಿಯ ಚುನಾವಣೆಯಲ್ಲಿ 18 ವರ್ಷ ಪೂರೈಸಿದ ಮಂಗಳಮುಖಿಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಗುರುತಿನ ಚೀಟಿ ಪಡೆಯದ ಅರ್ಹ ಮತದಾರರು ಕೂಡಲೇ ತಮ್ಮ ಹೆಸರನ್ನು ನೋಂದಾಯಿಸ ಬೇಕು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳಾಪಟ್ಟಿಯಂತೆ ಡಿ.8ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶವಿದೆ ಅರ್ಹರ ಪಟ್ಟಿಯನ್ನು ನೀಡುವಂತೆ ಅವರು ಸೂಚಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾ. ಶೋಭಾ ಬಿ.ಜಿ. ಅವರು ಮಾತನಾಡಿ, ಕಾನೂನು ಸೇವಾ ಸೆಲ್‌ನಲ್ಲಿ ಸೇವೆ ಸಲ್ಲಿಸಲು ಆಸಕ್ತರಿರುವ ಮಂಗಳಮುಖಿಯರು ಅರ್ಜಿ ಸಲ್ಲಿಸಬಹುದು. ಅವರಿಗೆ ಗೌರವಧನ ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ರವೀನಾ, ಬಿಂದು, ಪ್ರಿಯ, ಪ್ರವೀಣ, ಸಂಜನಾ, ಪ್ರೇಮ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Similar News