ಡಿ.10: ಕಟಪಾಡಿಯಲ್ಲಿ ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Update: 2022-12-05 14:52 GMT

ಉಡುಪಿ, ಡಿ.5: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಾಪು ತಾಲ್ಲೂಕು ಘಟಕದ ೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕಟಪಾಡಿ ಎಸ್‌ವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10ರಂದು ಹಿರಿಯ ಬಹುಭಾಷಾ ಸಾಹಿತಿ, ರಂಗಕರ್ಮಿ ಕ್ಯಾಥರಿನ್ ರೊಡ್ರಿಗಸ್ ಕಟಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಜರಗಲಿದೆ.

ಭವ್ಯ ಶೋಭಾಯಾತ್ರೆಗೆ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸತ್ಯೇಂದ್ರ ಪೈ  ಚಾಲನೆ ನೀಡಲಿರುವರು. ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಸಮ್ಮೇಳನ ವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಗೋವಾ ವಿಮೋಚನಾ ಹೋರಾಟಗಾರ ಮಟ್ಟಾರು ವಿಠಲ ಕಿಣಿ, ನಿಕಟಪೂರ್ವ ಸಮ್ಮೇಳನದ ಸರ್ವಾ ಧ್ಯಕ್ಷ ಭರತ್ ಕುಮಾರ್ ಪೊಲಿಪು ಉಪಸ್ಥಿತರಿರಲಿರುವರು. ಸಮ್ಮೇಳನದಲ್ಲಿ ವಿಚಾರಗೋಷ್ಠಿಗಳು, ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕಾಪು ಸರಕಾರಿ ಪ್ರ.ದ. ಕಾಲೇಜಿನ ಪ್ರಾಚಾರ್ಯ ಪ್ರೊ.ಸ್ಟೀವನ್ ಕ್ವಾಡ್ರಸ್ ಸಮಾರೋಪ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಕಸಾಪ ಕಾಪು ತಾಲ್ಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ದಯಾನಂದ ಪೈ, ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News