ಜನವರಿ ಅಂತ್ಯಕ್ಕೆ ಹಂಪಿ ಉತ್ಸವ: ಸಚಿವೆ ಶಶಿಕಲಾ ಜೊಲ್ಲೆ

Update: 2022-12-05 18:03 GMT

ಹೊಸಪೇಟೆ(ವಿಜಯನಗರ), ಡಿ.5: ವಿಜಯನಗರದ ಭವ್ಯತೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಂಪಿ ಉತ್ಸವ ಬಹಳ ಮಹತ್ವದ್ದು. ವಿಜಯನಗರ ನೂತನ ಜಿಲ್ಲೆಯಾದ ನಂತರ ನಡೆಯುತ್ತಿರುವ ಮೊದಲ ಉತ್ಸವ ಇದಾಗಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಜನವರಿ ಕೊನೆಯ ವಾರದಲ್ಲಿ ಉತ್ಸವ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಸೋಮವಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಜ.7 ಮತ್ತು 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ ಎಂದರು.

ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಮುಖ್ಯಮಂತ್ರಿ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. 

ಅದ್ದೂರಿ ಆಚರಣೆ: ಕೋವಿಡ್ ಸಾಂಕ್ರಾಮಿಕದ ಕಾರಣ ಎರಡು ವರ್ಷಗಳಿಂದ ಹಂಪಿ ಉತ್ಸವವನ್ನು ಆಯೋಜಿಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ನಿಟ್ಟಿನಲ್ಲಿ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

ಉತ್ಸವಕ್ಕೆ ಅನುದಾನ: ಈಗಾಗಲೇ 2021-22ನೆ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದು, 6 ಕೋಟಿ ರೂ.ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಜೊತೆಗೆ, ವಿವಿಧ ಇಲಾಖೆಗಳಿಗೂ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‍ಆರ್ ನಿಧಿಯನ್ನು ನೀಡುವಂತೆಯೂ ಕೋರಲಾಗುವುದು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. 

2 ಮುಖ್ಯ ವೇದಿಕೆ: ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆಯ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಉತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ., ವರಿಷ್ಠಾಧಿಕಾರಿ ಶ್ರೀಹರಿಬಾಬು, ಸಂಸದ ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಸುಂಕಮ್ಮ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Similar News