ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಮನೋಜ್ ಜೈನ್

Update: 2022-12-06 15:03 GMT

ಉಡುಪಿ, ಡಿ.6: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡ‌ ಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆಗಳನ್ನು ನೀಡಿದರು.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸ ಲಾಗಿದೆ ಎಂದರು.

ಈ ಬಗ್ಗೆ ಆಕ್ಷೇಪಣೆ ಹಾಗೂ ಕ್ಲೇಮುಗಳನ್ನು ಆಹ್ವಾನಿಸಿದ್ದು, ಮತದಾರರ ಸೇರ್ಪಡೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನಾ ಕಾರ್ಯಗಳನ್ನು ಕೈಗೊಳ್ಳುತಿದ್ದಾರೆ. ಇದರ ಮೇಲುಸ್ತುವಾರಿ ಯನ್ನು ಉನ್ನತ ಮಟ್ಟದ ಅಧಿಕಾರಿಗಳು ಸಹ ಕೈಗೊಳ್ಳಬೇಕು ಎಂದ ಅವರು ಜಿಲ್ಲೆಯಲ್ಲಿ  ಮತದಾರರ ಪಟ್ಟಿಗೆ ಆಧಾರ್ ಲಿಂಕ್‌ಜೋಡಣೆಯು ಶೇ.೮೫.೬೪ ರಷ್ಟು ಆಗಿದೆ ಎಂದರು.

ಯುವಜನರಿಗೆ ಮತದಾನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ವ್ಯವಸ್ಥಿತ ಶಿಕ್ಷಣ ಒದಗಿಸುವ ಕಾರ್ಯಗಳನ್ನು, ಸಾಮಾಜಿಕ ಜಾಲತಾಣಗಳಲ್ಲಿ  ಹೆಚ್ಚಿನ ಪ್ರಚಾರ ಪಡಿಸುವುದರೊಂದಿಗೆ ಹೆಚ್ಚು ಜನರು ನೊಂದಾಯಿಸಿಕೊಳ್ಳಲು ಮುಂದಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.   

ಮತದಾರರ ಪಟ್ಟಿಯಲ್ಲಿ ನೊಂದಾಯಿಸಿದ ವಿಶೇಷ ಚೇತನರನ್ನು ಗುರುತಿಸಿ, ಅವರುಗಳು ಮತದಾನ ಮಾಡಲು ಬರುವ ಸಂದರ್ಭದಲ್ಲಿ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Similar News