'ಈ ಕ್ಷೇತ್ರದ ಜನತೆಯನ್ನು ನಾನು ಎಂದಿಗೂ ಮರೆಯಲಾರೆ...': ವರುಣಾದಲ್ಲಿ ಸಿದ್ದರಾಮಯ್ಯ ಪ್ರವಾಸ

Update: 2022-12-08 16:18 GMT

ಮೈಸೂರು,ಡಿ.8: ವರುಣಾ ವಿಧಾಸಭಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದರು.

ವರುಣಾ ವಿಧಾನಸಭಾ ಕ್ಷೇತ್ರದ ಹದಿನಾರು ಮೂಳೆಯಲ್ಲಿ ನಡೆದ ಉಪ್ಪಾರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿನಿಂದ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲೇ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿ ಹಾರ ಹಾಕಿ ಜೈ ಕಾರ ಕೂಗಿದರು.

ವರುಣಾ ಕ್ಷೇತ್ರದ ಹದಿನಾರು ಮೂಳೆಯಲ್ಲಿ ಕಾರ್ಯಕ್ರಮ ಮುಗಿಸಿ ಸುತ್ತೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು.

ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಕೂಗಿದರು. ಮುಂದಿನ ಚುನಾವಣೆಗೆ ವರುಣಾ ದಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದರು.

ಇದೇ ವೇಳೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, 'ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರಋಣಿ.  ನಾನು ವಿರೋಧ ಪಕ್ಷದ ನಾಯಕನಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಕ್ಷೇತ್ರ  ವರುಣ. ಈ ಕ್ಷೇತ್ರದ ಜನತೆಯನ್ನು ನಾನು ಎಂದಿಗೂ ಮರೆಯಲಾರೆ. ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ' ಎಂದು ಹೇಳಿದರು.

''ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಅರ್ಜಿ ಹಾಕಿದ್ದೇನೆ ಪಕ್ಷದ ಹೈಕಮಾಂಡ್ ಎಲ್ಲಿ ಸ್ಪರ್ಧೆ ಮಾಡಿ ಎಂದು ಹೇಳುತ್ತಾರೊ ಅಲ್ಲಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ. ಬಾದಾಮಿ ಆಗಿರಬಹುದು ಕೋಲಾರ ಇರಬಹುದು ಅಥವಾ ವರುಣದಲ್ಲೇ ಸ್ಪರ್ಧೆ ಮಾಡಿ ಎಂದರೆ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ'' ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ, ವಾಲ್ಮೀಕಿ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಮಾಜಿ ಜಿ.ಪಂ. ಅಧ್ಯಕ್ಷ ಬಿ.ಎಂ.ರಾಮು, ಕಾಂಗ್ರೆಸ್ ಮುಖಂಡರುಗಳಾದ ಕೆ.ಮರೀಗೌಡ, ಸುನೀಲ್ ಬೋಸ್, ಹೆಜ್ಜಿಗೆ ಇಂಧನ್ ಬಾಬು, ನಂಜನಗೂಡು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಶಿವನಂಜು, ಗ್ರಾ.ಪಂ. ಅಧ್ಯಕ್ಷೆ ಗಾಯಿತ್ರಿ ಮಹಾದೇವ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಲಕ್ಷ್ಮಿ ಬಿ.ಪಿ.ಮಹಾದೇವ, ಸದಸ್ಯರಾದ ನಂಜಯ್ಯ, ಬಿ.ಶಿವಣ್ಣ, ರವಿ ಆನಂದ್, ಶೃತಿ ಬೀರಯ್ಯ, ಹೆಜ್ಜಿಗೆ ರಮೇಶ್, ಪ್ರಭು, ಕೆ.ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Full View

Similar News