ಕೋಟೇಶ್ವರ: ಶ್ರೀಕೋಟಿ ಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮ ರಥೋತ್ಸವ

Update: 2022-12-09 13:10 GMT

ಕುಂದಾಪುರ, ಡಿ.9: ಕೋಟೇಶ್ವರದಲ್ಲಿ ಗುರುವಾರ ನಡೆದ ಶ್ರೀಕೋಟಿ ಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮ ರಥೋತ್ಸವ(ಕೊಡಿ ಹಬ್ಬ)ಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು.

ನಸುಕಿನಿಂದಲೆ ಧಾರ್ಮಿಕ ಆಚರಣೆಗೆ ತೊಡಗಿದ ಭಕ್ತರು, ಮಕರ ಲಗ್ನದ ಸುಮುಹೂರ್ತದಲ್ಲಿ ನಡೆದ ಮನ್ಮಹಾರಥೋತ್ಸವದ ಆರೋಹಣ  ವನ್ನು ಕಣ್ಮನದಲ್ಲಿ ತುಂಬಿಕೊಂಡರು. ಕೋಟಿ ತೀರ್ಥ ಸರೋವರದಲ್ಲಿ ಶುಚಿ ಭೂತರಾಗಿ ದೇವಸ್ಥಾನಕ್ಕೆ ಬರುವ ಭಕ್ತರು ಸರೋವರದ ಸುತ್ತ ಅಪೇಕ್ಷಿತರು ಹಾಸಿದ ಬಿಳಿ ಬಟ್ಟೆಯ ಮೇಲೆ ಮುಡಿ ಅಕ್ಕಿ ಚಲ್ಲುವ ಪಾರಂಪರಿಕ ಸುತ್ತಕ್ಕಿ ಸೇವೆಯಲ್ಲಿ ಪಾಲ್ಗೊಂಡ ಬಳಿಕ ದೇವರ ದರ್ಶನ ಪಡೆದು ಸಂಪ್ರದಾಯಬದ್ದ ಪೂಜೆ ಸಲ್ಲಿಸಿದರು.

ದೇವಸ್ಥಾನದಿಂದ ವೈಭವದ ಮೆರವಣಿಗೆಯಲ್ಲಿ ಬಂದ ಕೋಟಿಲಿಂಗೇಶ್ವರ ಹಾಗೂ ಪರಿವಾರ ದೇವತೆಗಳನ್ನು ಕುಳ್ಳಿರಿಸಿದ ರಥವನ್ನು ರಥ ಬೀದಿಯಲ್ಲಿ ಜಯ ಘೋಷದೊಂದಿಗೆ ಎಳೆಯುವ ಮೂಲಕ ರಥೋತ್ಸವವನ್ನು ಆಚರಿಸಲಾಯಿತು.

ಕೋಟೇಶ್ವರದ ರಥ ಬೀದಿ, ಊರಿನ ಪ್ರಮುಖ ಬೀದಿಗಳು, ಕೋಟೇಶ್ವರ ದಿಂದ ಕುಂಭಾಸಿಯವರೆಗೆ ಹಾಗೂ ಕೋಟೇಶ್ವರದಿಂದ ಹಂಗಳೂರು ವಿನಾಯಕವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ದೀಪಾಲಂಕಾರ ಮಾಡ ಲಾಗಿತ್ತು. ಕೋಟೇಶ್ವರದಲ್ಲಿ ವಿವಿಧ ಸಂಘಟನೆಗಳಿಂದ ಜಾತ್ರಾ ಉತ್ಸವವಕ್ಕಾಗಿ ಆಕರ್ಷಕ ದೃಶ್ಯ ಸಂಯೋಜನೆ, ಹಣತೆ ದೀಪಾಲಂಕಾರ ಹಾಗೂ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು. ದೇವಸ್ಥಾನ ಹಾಗೂ ಬ್ರಹ್ಮ ರಥಕ್ಕೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ವಿವಿಧ ಸಂಘ- ಸಂಸ್ಥೆಗಳಿಂದ ಉಚಿತ ಪಾನಕ ಹಾಗೂ ಮಜ್ಜಿಗೆ ವಿತರಣೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಪ್ರಭಾಕರ ಶೆಟ್ಟಿ, ಸಮಿತಿ ಸದಸ್ಯರಾದ ಸುರೇಶ್ ಶೇರೆಗಾರ್ ಬೀಜಾಡಿ, ಚಂದ್ರಿಕಾ ಧನ್ಯ ಕೋಟೇಶ್ವರ, ಶಾರದಾ ಮೂಡುಗೋಪಾಡಿ, ಮಂಜುನಾಥ ಆಚಾರ್ಯ, ಭಾರತಿ, ತಂತ್ರಿ ಪ್ರಸನ್ನ ಕುಮಾರ್ ಐತಾಳ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ಕುಮಾರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮಾರ್ಕೋಡು ಗೋಪಾಲಕೃಷ್ಣ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಬಿ.ಹಿರಿಯಣ್ಣ, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮಲ್ಯಾಡಿ ಶಿವರಾಮ್ ಶೆಟ್ಟಿ, ಉದ್ಯಮಿ ಮಾರ್ಕೋಡು ಸುಧೀರ್ ಕುಮಾರ ಶೆಟ್ಟಿ, ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.

Similar News