ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ
Update: 2022-12-25 13:01 IST
ಬೆಂಗಳೂರು, ಡಿ.25: ಕೆಲ ದಿನಗಳಿಂದ ಬಿಜೆಪಿ ಬಗ್ಗೆ ಅಸಮಾಧಾನ ಹೊರಹಾಕುವ ಮೂಲಕ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.
ನಗರದಲ್ಲಿರುವ ತಮ್ಮ 'ಪಾರಿಜಾತ' ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷ ಸ್ಥಾಪಿಸಿ ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸುವುದಾಗಿ ಹೇಳಿದ್ದಾರೆ.
'ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ನನ್ನ ಪಕ್ಷ ರಾಜ್ಯದ ಜನರ ಮನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರೆಡ್ಡಿ, ಯಾವೆಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂಬ ಬಗ್ಗೆ ಶೀಘ್ರದಲ್ಲೇ ತಿಳಿಸುತ್ತೇನೆ, ಪಕ್ಷದ ಪ್ರಣಾಳಿಕೆಯನ್ನು ಶೀಘ್ರ ಘೋಷಿಸುತ್ತೇನೆ' ಎಂದು ಹೇಳಿದರು.