ಇದೇ ತಿಂಗಳು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ಬೆಂಗಳೂರು, ಜ.3: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದೇ ಜನವರಿ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಚಿಂತಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕ ಭೀಮಾ ನಾಯ್ಕ ಆಯೋಜಿಸಿದ್ದ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರ ಅಲೆ ಇರುವುದರಿಂದ, ಈ ಬಾರಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾರೆ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಬೇರೆ ಇನ್ನೇನಾದರೂ ಮಾಡಿಕೊಳ್ಳಲಿ. ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ಈ ಬಾರಿ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಸಿದ್ದರಾಮಯ್ಯ ಹೇಳಿದರು.
ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವರು ಪಕ್ಷಗಳನ್ನು ಕಟ್ಟಿದ್ದರು. ಆನಂತರ ಏನೆಲ್ಲಾ ಬೆಳವಣಿಗೆಗಳು ಆಗಿವೆ ಎಂಬ ಇತಿಹಾಸ ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದರು.
ಹೊಸ ಪಕ್ಷಗಳನ್ನು ಕಟ್ಟಬಾರದು ಎಂದು ನಾನು ಹೇಳುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುವುದು ಮತದಾರರು ಎಂದು ಸಿದ್ದರಾಮಯ್ಯ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಂತೋಷ್ ಲಾಡ್, ಶಾಸಕರಾದ ಭೀಮ ನಾಯ್ಕ, ಜೆ.ಎನ್.ಗಣೇಶ್, ಪಿ.ಟಿ.ಪರಮೇಶ್ವರ ನಾಯ್ಕ, ಭೈರತಿ ಸುರೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಘಟಕ ಅಧ್ಯಕ್ಷ ಮುಹಮ್ಮದ್ ರಫೀಕ್, ಗ್ರಾಮೀಣ ಘಟಕದ ಅಧ್ಯಕ್ಷ ಬಿ.ವಿ.ಶಿವಯೋಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.