ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖಾ ತಂಡ ರಚಿಸಿದ ಪೊಲೀಸರು

Update: 2023-01-05 07:44 GMT

ಹೊಸ ದಿಲ್ಲಿ: ಕಳೆದ ನವೆಂಬರ್ ತಿಂಗಳಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಪ್ರಯಾಣಿಸುತ್ತಿದ್ದ ಹಿರಿಯ ವಯಸ್ಸಿನ ಮಹಿಳಾ ಸಹ ಪ್ರಯಾಣಕಿಯ ಮೇಲೆ ಮೂತ್ರ ವಿಸರ್ಜಿಸಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಸೆರೆ ಹಿಡಿಯಲು ಪೊಲೀಸರು ತಂಡವೊಂದನ್ನು ರಚಿಸಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಆಘಾತಕಾರಿ ಘಟನೆಯ ಬಗ್ಗೆ ಏರ್ ಇಂಡಿಯಾ ಸಲ್ಲಿಸಿರುವ ದೂರನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 509, 510ರ ಅಡಿ ಹಾಗೂ ಭಾರತೀಯ ವಿಮಾನ ಕಾಯ್ದೆಯ ಸೆಕ್ಷನ್ 23ರ ಅಡಿ ಪೊಲೀಸರು ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ದಿಲ್ಲಿ ಹೊರವಲಯಕ್ಕೆ ಸೇರಿದವರು ಎಂದು ಹೇಳಲಾಗಿದೆ.

ನವೆಂಬರ್ 26ರಂದು ಜಾನ್ ಎಫ್. ಕೆನಡಿ ವಿಮಾನ ನಿಲ್ದಾಣದ ಮೂಲಕ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, "ಆರೋಪಿ ಪ್ರಯಾಣಿಕನನ್ನು ಪತ್ತೆ ಹಚ್ಚಲು ತಂಡವನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು" ಎಂದು ತಿಳಿಸಿದ್ದಾರೆ.

ತನ್ನ ಕ್ರಮದ ಭಾಗವಾಗಿ, ತನಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲು ಇರುವ ಅನುಮತಿಯ ಅನುಸಾರ ಆರೋಪಿ ಪ್ರಯಾಣಿಕ 30 ದಿನಗಳ ಕಾಲ ತನ್ನ ವಿಮಾನದಲ್ಲಿ ಪ್ರಯಾಣಿಸದಂತೆ ನಿಷೇಧ ವಿಧಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿಕೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಕ್ತಾರರು, "ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಈಗಾಗಲೇ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಕಾನೂನು ಜಾರಿ ಸಂಸ್ಥೆಗಳು ಸೇರಿದಂತೆ ಎಲ್ಲ ನಿಯಂತ್ರಣ ಪ್ರಾಧಿಕಾರಗಳಿಗೆ ನೆರವು ನೀಡಲು ಏರ್ ಇಂಡಿಯಾ ಬದ್ಧವಾಗಿದೆ" ಎಂದು ಹೇಳಿದ್ದಾರೆ.

Similar News