ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ: ಪಟ್ಟಿಯಿಂದ ಕೈ ಬಿಡಲಾದ ಮತದಾರರ ಸಂಖ್ಯೆ 18,441
ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಇಲ್ಲಿದೆ...
ಮಂಗಳೂರು: ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಿಸಿದ್ದಾರೆ. ಗುರುವಾರ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಆ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದರು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ ಎಂದರು. 47,174 ಹೊಸ ಮತದಾರರ ಸೇರ್ಪಡೆಯಾಗಿದೆ. 18,441 ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. 18,678 ಮತದಾರರು ಕ್ಷೇತ್ರದಿಂದ ಕ್ಷೇತ್ರಕ್ಕೆ, ಜಿಲ್ಲೆಯಿಂದ ಜಿಲ್ಲೆಗಳಿಗೆ ವರ್ಗಾವಣೆಗೊಂಡವರ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 25,259 ಯುವ ಮತದಾರರಿದ್ದಾರೆ. ಅಲ್ಲದೆ 13,706 ವಿಕಲಚೇತನರು, 6,392 ವಿವಿಐಪಿ, 546 ಸೇವಾ ಮತದಾರರು ಮತ್ತು 225 ಎನ್‌ಆರ್‌ಐ ಮತದಾರರಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.
ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ-‘8ಎ’ ರಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ್ದು, ನಮೂನೆ-8ರಲ್ಲಿ ಒದಗಿಸಲಾಗಿದೆ. 2022ರ ಸೆಪ್ಟೆಂಬರ್ 1ರ ನಂತರದಲ್ಲಿ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಮತದಾರರ ಗುರುತಿನ ಚೀಟಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಮತದಾರರಿಗೆ ವಿತರಣೆ ಮಾಡಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಲುವಾಗಿ 1950 ಮತದಾರರ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಯಿದ್ದಲ್ಲಿ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಸಲಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥ ಪಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.