ಫೆಬ್ರವರಿಯಲ್ಲಿ ಬೃಹತ್-ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ: ಸಚಿವ ಎಂಟಿಬಿ ನಾಗರಾಜು

Update: 2023-01-05 17:29 GMT

ಬೆಂಗಳೂರು, ಜ. 5: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿರುವ ಬೃಹತ್ ಕೈಗಾರಿಕೆಗಳಿಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಗಾಗಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳನ್ನು ಒಂದೆಡೆ ಸೇರಿಸಿ ಬರುವ ಫೆಬ್ರವರಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಂಡಿರುವ ಬೃಹತ್ ಉದ್ದಿಮೆಗಳಿಗೆ ಭಾರಿ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯ ಬೀಳಲಿದೆ. ಅದಕ್ಕಾಗಿ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಫೆಬ್ರವರಿ ನಾಲ್ಕನೆ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಸಣ್ಣ ಉದ್ದಿಮೆದಾರರನ್ನು ಒಂದೆಡೆ ಸೇರಿಸಿ ಸಮಾವೇಶ ನಡೆಸಲಾಗುವುದು. ತಾತ್ಕಾಲಿಕವಾಗಿ ಫೆಬ್ರವರಿ 22 ಮತ್ತು 23ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಸಿಎಂ ಜತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಸಮಾವೇಶದಲ್ಲಿ ಟೆಕ್ನಿಕಲ್ ಸೆಷನ್, ಬಿ2ಬಿ ಸಭೆಗಳು, ವಸ್ತು ಪ್ರದರ್ಶನ, ತಜ್ಞರ ಭಾಷಣಗಳು ಇರಲಿವೆ. ಸಣ್ಣ ಕೈಗಾರಿಕೆಗಳಿಗೆ ಅಗತ್ಯವಾದ ಭೂಮಿ ಒದಗಿಸುವುದು ಸೇರಿದಂತೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ಸಮಾವೇಶದ ಯಶಸ್ಸಿಗಾಗಿ ದೇಶಾದ್ಯಂತ ರೋಡ್ ಶೋ ನಡೆಸಲಾಗುವುದು ಎಂದು ಎಂಟಿಬಿ ನಾಗರಾಜು ವಿವರಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪಾ, ಎಂಎಸ್‍ಎಂಇ ನಿರ್ದೇಶಕಿ ಸತ್ಯಭಾಮ, ಕೆಎಸ್‍ಎಸ್‍ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜೆ.ಸೋಮಶೇಖರ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸಿಇಒ ಬಸವರಾಜು, ಕಾಸಿಯಾ ಅಧ್ಯಕ್ಷ ಕೆ.ಎನ್.ನರಸಿಂಹಮೂರ್ತಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಪಾಲ್ಗೊಂಡಿದ್ದರು.

Similar News