ಬೆಂಗಳೂರು | ಶಾಲೆಗೆ ಬಾಂಬ್ ಬೆದರಿಕೆ: ಸುರಕ್ಷಿತ ಸ್ಥಳಕ್ಕೆ ವಿದ್ಯಾರ್ಥಿಗಳ ಸ್ಥಳಾಂತರ
Update: 2023-01-06 15:33 IST
ಬೆಂಗಳೂರು, ಜ.6: ನಗರದ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ದಳ ಸೇರಿದಂತೆ ಶ್ವಾನ ದಳ, ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜಾಜಿನಗರದ ಖಾಸಗಿ ಶಾಲೆಯ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ ಎನ್ನಲಾಗಿದ್ದು, ಈ ಬಗ್ಗೆ ಶಾಲೆ ಸಿಬ್ಬಂದಿ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿವೆ ಎಂದು ತಿಳಿದು ಬಂದಿದೆ.
ಸದ್ಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದರಿಂದ ಶಿಕ್ಷಕರು, ಪೋಷಕರು, ಮಕ್ಕಳು ಆತಂಕಕ್ಕೆ ಒಳಗಾದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.