ಭಟ್ಕಳ: ಜ.10ರಿಂದ ಅಳ್ವೆಕೋಡಿ ಮಾರಿ ಜಾತ್ರಾ ಮಹೋತ್ಸವ
ಭಟ್ಕಳ: ಭಟ್ಕಳ ಶಿರಾಲಿಯ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಮಾರಿಜಾತ್ರಾ ಮಹೋತ್ಸವ ಜ.10 ಮತ್ತು 11ರಂದು ವಿಜ್ರಂಭಣೆಯಿಂದ ಜರುಗಲಿದೆ.
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಅಳ್ವೆಕೋಡಿ ಮಾರಿಜಾತ್ರಾ ಮಹೋತ್ಸವವು ಜ.10ರಂದು ಬೆಳಿಗ್ಗೆ 8.20ಕ್ಕೆ ಮಾರಿಮೂರ್ತಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ ಪೂಜೆಯನ್ನು ಸಲ್ಲಿಸುವ ಮೂಲಕ ಆರಂಭವಾಗಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಚಿತ್ರಾಪುರ ಸಂಸ್ಥಾನ ಮಠಾಧೀಶ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ, ಶಾಸಕ ಸುನಿಲ್ ನಾಯ್ಕ ಉಪಸ್ಥಿತರಿವರು.
ಮಧ್ಯಾಹ್ನ 12 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಾರಿಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಮಾ ಮೊಗೇರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಮಂಕಾಳ ಎಸ್. ವೈದ್ಯ, ಅತಿಥಿಗಳಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನಿ ಉಪಸ್ಥಿತರಿರುವರು. ರಾತ್ರಿ 9.30ರಿಂದ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಕದಂಬ ಕೌಶಿಕೆ, ಕನಕಾಂಗಿ ಕಲ್ಯಾಣ ಯಕ್ಷಗಾನ ಬಯಲಾಟ ನಡೆಯಲಿದೆ.
ಜ.11ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಉಪಸ್ಥಿರರಿರುವರು ಎಂದು ತಿಳಿಸಲಾಗಿದೆ.
ನಂತರ ಸಂಜೆ 5 ಗಂಟೆಗೆ ಮಾರಿಕಾಂಬಾ ಮೂರ್ತಿಯ ವಿಸರ್ಜನಾ ಮೆರವಣಿಗೆ ಆರಂಭವಾಗಿ ಅಳ್ವೇಕೋಡಿಯಿಂದ ಸಣಬಾವಿ, ಯಕ್ಷೆಮನೆ ಮಾರ್ಗವಾಗಿ ಮಾವಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮೂಲಕ ಶಿರಾಲಿಯ ಗುಡಿಹಿತ್ತಲ ಕಂಚಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ತಲುಪಿ ವಿಸರ್ಜಿಸಲಾಗುವುದು. ಅಳ್ವೆಕೋಡಿಯಲ್ಲಿ ಮಾರಿಜಾತ್ರಾ ತಯಾರಿ ಭರದಿಂದ ಸಾಗಿದ್ದು, ನೂರಾರು ಸ್ವಯಂ ಸೇವಕರು ಕೆಲಸ ಮಾಡುತ್ತಿದ್ದಾರೆ. ಅಳ್ವೆಕೋಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಎರಡು ದಿನ ನಡೆಯುವ ಮಾರಿ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಮಾರಿಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಎಂ ಮೊಗೇರ ತಿಳಿಸಿದ್ದಾರೆ.