ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪ್ರಕರಣ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

Update: 2023-01-12 16:01 GMT

ಬೆಂಗಳೂರು, ಜ.12: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಪ್ರಕ್ರಿಯೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಗುರುವಾರ ಸರಕಾರಕ್ಕೆ ನಿರ್ದೇಶನ ನೀಡಿದೆ. 

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಬಾರದು ಎಂದು ಕೋರಿ ಬೆಂಗಳೂರಿನ ಡಿ.ಜಿ.ರಾಘವೇಂದ್ರ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ಅರ್ಜಿದಾರರ ಪರ ವಾದಿಸಿದ ಮಾಜಿ ಅಡ್ವೊಕೇಟ್ ಜನರಲ್, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಅವರು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣಾ ಹಂತದಲ್ಲಿದೆ. ಈ ನಡುವೆ, ಮೀಸಲಾತಿ ನೀಡುವ ಸಂಬಂಧ ಸರಕಾರ ಕೆಲ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಹೀಗಾಗಿ, ತುರ್ತು ವಿಚಾರಣೆಗೆ ಕೈಗೊಳ್ಳಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಅಲ್ಲದೇ, ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸರಕಾರ ಕೈಗೊಂಡಿರುವ ನಿರ್ಧಾರಗಳಿಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದು ಈ ಹಿಂದೆ ಸರಕಾರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದರು. ಆದರೂ ಈವರೆಗೂ ಯಾವುದೇ ಲಕೋಟೆಯನ್ನು ಪೀಠಕ್ಕೆ ಸಲ್ಲಿಸಿಲ್ಲ. ಹೀಗಾಗಿ, ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಮೀಸಲಾತಿ ನೀಡುವುದಕ್ಕೆ ಸಂಬAಧದ ಪ್ರಕ್ರಿಯೆ ಕುರಿತು ಸರಕಾರ ವರದಿ ಸಲ್ಲಿಸಲಿದೆ. ಹೀಗಾಗಿ, ತಡೆ ನೀಡಬಾರದು ಎಂದು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಈವರೆಗೂ ಕೈಗೊಂಡಿರುವ ಪ್ರಕ್ರಿಯೆ ಮುಂದುವರಿಸದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

2 ಡಿ ಕೆಟಗರಿ ತಿರಸ್ಕೃತ: ಹೊಸದಾಗಿ 2ಸಿ ಹಾಗೂ 2ಡಿ ಕೆಟಗರಿ ಸೃಷ್ಟಿಸುವ ಬಗ್ಗೆಯೂ ಹಲವು ಗೊಂದಲಗಳ ಗೂಡಾಗಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯ ತಮಗೆ ಸರಕಾರ ನೀಡಿದ್ದ 2ಡಿ ಕೆಟಗರಿಯನ್ನು ತಿರಸ್ಕರಿಸಿದ್ದು, 2ಎ ಮೀಸಲಾತಿ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ಸರಕಾರಕ್ಕೆ ಆಗ್ರಹಿಸಿದೆ.

Similar News