ಯುವಜನತೆಯಿಂದ ವಿವೇಕಾನಂದರ ಸಂದೇಶಗಳ ಪಾಲನೆಯಾಗಲಿ: ಶೋಭಾ ಕರಂದ್ಲಾಜೆ

Update: 2023-01-12 16:49 GMT

ಉಡುಪಿ: ಸ್ವಾಮಿ ವಿವೇಕಾನಂದರು ನೀಡಿರುವ ಸಂದೇಶಗಳನ್ನು ಯುವಜನತೆ ತಮ್ಮ ಭವಿಷ್ಯದ ಗುರಿಯನ್ನಾಗಿಸಿಕೊಂಡು ಜೀವನದಲ್ಲಿ ಅತ್ಯುನ್ನತ ಸಾಧನೆಗಳನ್ನು ಮಾಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಗುರುವಾರ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ,  ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ನಡೆದ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವ ಧರ್ಮ ಸಮ್ಮೇಳನದ ಮೂಲಕ ವಿವೇಕಾನಂದರು ಇಡೀ ವಿಶ್ವಕ್ಕೆ ಭಾರತದ ವೈಚಾರಿಕತೆಯನ್ನು ತಿಳಿಸುವ ಮೂಲಕ ದೇಶದ ಹಿರಿಮೆ, ಗರಿಮೆಯನ್ನು ಸಾರಿದ್ದಾರೆ. ದೇಶಪ್ರೇಮದ ಅವರ ಸಂದೇಶಗಳು ಭಾರತ ಸ್ವಾತಂತ್ರ್ಯ ಸಂಗ್ರಾಮದ ಅಸಂಖ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿ ನೀಡಿವೆ. ಯುವ ಶಕ್ತಿಯ ಕುರಿತು ಅವರು ನೀಡಿರುವ ಸಂದೇಶಗಳನ್ನು ಯುವ ಜನತೆ ತಮ್ಮ ಗುರಿಯನ್ನಾಗಿ ಮಾಡಿಕೊಂಡು, ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.

ಸ್ವಾಮಿ ವಿವೇಕಾನಂದರ ಕುರಿತು ಪತ್ರಕರ್ತ ಶ್ರೀಕಾಂತ ಶೆಟ್ಟಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಉದಯ್‌ಕುಮಾರ್ ಶೆಟ್ಟಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಡಾ.ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.

Similar News