ಕೇರಳದ ವೈದ್ಯರ ನಿರ್ಲಕ್ಷ್ಯದಿಂದ ಗಾಯಾಳು ಮೃತ್ಯು ಪ್ರಕರಣ: ಮಂಗಳೂರಿನಲ್ಲಿ ಪ್ರಕರಣ ದಾಖಲು
ಮಂಗಳೂರು: ಕೇರಳದ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತಪಟ್ಟ ಹಿನ್ನೆಲೆಯಲ್ಲಿ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
2022ರ ಜುಲೈ 10ರಂದು ಕಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಮತ್ತು ಪಿಕ್‌ಅಪ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಸಬೀನ್ ಅವರನ್ನು ಪ್ರಥಮ ಚಿಕಿತ್ಸೆಗಾಗಿ ಕಣ್ಣೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣುರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಅದರಂತೆ ಸಬೀನ್‌ಗೆ ನಗರದಲ್ಲಿ ಚಿಕಿತ್ಸೆ ನೀಡಲಾಗಿದ್ದರೂ 2022ರ ಜುಲೈ 20ರಂದು ಮೃತಪಟ್ಟಿದ್ದರು.
ಪ್ರಕರಣದ ತನಿಖೆಯ ವೇಳೆ ಶವ ಪರೀಕ್ಷೆ ನಡೆಸಿದ್ದ ವೈದ್ಯಾಧಿಕಾರಿಯು ಗಾಯಾಳು ಸಬೀನ್ ಮರಣ ಹೊಂದಲು 2022ರ ಜುಲೈ 19ರಂದು ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ವರದಿ ನೀಡಿದ ಮೇರೆಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬ್ರಹ್ಮಾವರ: ಹಸುಗೂಸು ಸಂಶಯಾಸ್ಪದ ಸಾವು