ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ವಿವಿಧೆಡೆ ಕಾಂಗ್ರೆಸ್ ಮೌನ ಪ್ರತಿಭಟನೆ

Update: 2023-01-23 09:22 GMT

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಹಾಳಾಗುತ್ತಿರುವ 'ಬೆಂಗಳೂರು ಉಳಿಸಿ' ಆಂದೋಲನದ ಅಂಗವಾಗಿ ಕಾಂಗ್ರೆಸ್ ವತಿಯಿಂದ ಮಹಾನಗರದ ವಿವಿಧ ಕಡೆಗಳಲ್ಲಿ ಇಂದು (ಸೋಮವಾರ) ಮೌನ ಪ್ರತಿಭಟನೆ ನಡೆಸಲಾಯಿತು. 

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು,''ನಮ್ಮ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಕೋಲಾರದಲ್ಲಿ ಇಂದು ಪ್ರಜಾಧ್ವನಿ ಯಾತ್ರೆ ಸಮಾವೇಶ ನಡೆಯಲಿದ್ದು, ಮಾರ್ಗ ಮಧ್ಯದಲ್ಲಿ ಟ್ರಿನಿಟಿ ವೃತ್ತದ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಕ್ಷದ ನಾಯಕರೆಲ್ಲರೂ ಪಾಲ್ಗೊಂಡಿದ್ದೇವೆ' ಎಂದರು.  

'ಕರ್ನಾಟಕ ಭ್ರಷ್ಟಾಚಾರದ ರಾಜಧಾನಿ': ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಬೆಂಗಳೂರು ರಸ್ತೆ ಗುಂಡಿಗಳ ರಾಜಧಾನಿಯಾಗಿದೆ. ಕಸದ ಸಮಸ್ಯೆ ಹೆಚ್ಚಾಗಿದೆ. 40% ಕಮಿಷನ್  ಭ್ರಷ್ಟಾಚಾರದಿಂದ ನಗರದ ಕಾಮಗಾರಿಗಳು ಕಳಪೆಯಾಗಿವೆ. ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ.  ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಅನೇಕ ಸಾವುಗಳು ಸಂಭವಿಸಿದ್ದು, ಬಿಜೆಪಿ ಸರ್ಕಾರ ಈ ಸಮಸ್ಯೆಗೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

''ಇದಕ್ಕೆಲ್ಲ ಉತ್ತರ ನೀಡುವವರು ಯಾರು? ಸರ್ಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಕೇಳಲಾದ ಪ್ರಶ್ನೆಗಳಿಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬಿಜೆಪಿ ಸರ್ಕಾರಕ್ಕೆ ಬೆಂಗಳೂರು ನಗರ ಹಾಗೂ ರಾಜ್ಯದ ಜನರಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ' ಎಂದು ಹೇಳಿದರು. 

ಪ್ರತಿಭಟನೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ,  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಶಾಸಕ ಎನ್. ಹ್ಯಾರೀಸ್ ಭಾಗವಹಿಸಿದ್ದರು.

Similar News