ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ (ಜ.24) ಸಾರಿಗೆ ನೌಕರರ ಧರಣಿ; ಬಸ್ ಸಂಚಾರ ವ್ಯತ್ಯಯ ಸಾಧ್ಯತೆ

Update: 2023-01-23 13:20 GMT

ಬೆಂಗಳೂರು, ಜ.23: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆ(ಜ.24) ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಡಿಪೋಗಳ ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ಕಚೇರಿ ಮುಂಭಾಗ ಮತ್ತು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಚಳವಳಿ ನಡೆಯಲಿದೆ.

ಈ ಕುರಿತು ಮಾತನಾಡಿದ ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷವಾದರೂ ಈ ಬಗ್ಗೆ ಪ್ರಸ್ತಾಪಿಸಿಲ್ಲ. ನಿಯಮಬದ್ಧವಾಗಿ 2020ರ ಮಾರ್ಚ್‍ನಲ್ಲೇ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ಸರಕಾರ ಇದುವರೆಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ವಿರುದ್ಧ ಧರಣಿ ಸತ್ಯಾಗ್ರಹವನ್ನು ಕೈಗೊಂಡಿದ್ದೇವೆ ಎಂದರು.

ಜ.24ರಂದು ಫ್ರೀಡಂ ಪಾರ್ಕ್‍ನ ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಲಿರುವ ಹಿನ್ನಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆ ದೃಷ್ಟಿಯಿಂದ ನಮ್ಮ ಹೋರಾಟಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.

ನೌಕರರ ಬೇಡಿಕೆಗಳೇನು?: ಸಾರಿಗೆ ನೌಕರರಿಗೆ ಶೇ.25ರಷ್ಟು ವೇತನ ಹೆಚ್ಚಳ ಆಗಬೇಕು. ನೌಕರರ ಹಾಲಿ ಇರುವ ಬಾಟಾ, ಭತ್ಯೆಗಳು 5 ಪಟ್ಟು ಹೆಚ್ಚಿಸಬೇಕು. ವೈದ್ಯಕೀಯ ಸೌಲಭ್ಯ ನೀಡಬೇಕು ಮತ್ತು ಎಲ್ಲ ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2ಸಾವಿರ ರೂ.ಹಣ ನೀಡಬೇಕು. ಮುಷ್ಕರದ ವೇಳೆ ವಜಾಗೊಂಡ ನೌಕರರ ಮರುನೇಮಕ ಮಾಡಬೇಕು. ಹೆಚ್ಚುವರಿ ಕೆಲಸದ ಅವಧಿಗೆ ಸಮಯದ ಭತ್ಯೆ ನೀಡಬೇಕು. ನೌಕರರಿಗೆ ಪಾಳಿ ವ್ಯವಸ್ಥೆ ಜಾರಿಯಾಗಬೇಕು. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ನಿಲ್ಲಿಸಬೇಕು. ಎಲ್ಲಾ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. 

ಕೆಎಸ್ಸಾರ್ಟಿಸಿ ಕಾರ್ಯಚರಣೆಯಲ್ಲಿ ವ್ಯತ್ಯಯ ಇಲ್ಲ: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ನಾಳೆ(ಜ.24) ಬೆಳಗ್ಗೆ 11 ಗಂಟೆಯಿಂದ ಸಂಜೆ 5.30ರ ವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುವುದು ಸರಿಯಷ್ಟೇ. ಆದರೆ, ಈ ಸಂಬಂಧ ಕೆಎಸ್ಸಾರ್ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ.

Similar News