ಬೆಳ್ತಂಗಡಿ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ

Update: 2023-01-25 08:28 GMT

ಮಂಗಳೂರು, ಜ.25: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಎಫ್‌ಟಿಎಸ್‌ಸಿ-2 ಪೋಕ್ಸೊ) 20 ವರ್ಷದ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ್ತೆ 6 ತಿಂಗಳು ಶಿಕ್ಷೆ ಅನುಭವಿಸಲು ಆದೇಶಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದ ಎರ್ಮಾಳಪಲ್ಕೆ-ಕೊಂಬರೋಡಿ ಮನೆಯ ಬಾಬಿ (48) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.

ಈತನು 2021ರ ಡಿಸೆಂಬರ್ 19ರಿಂದ 2022ರ ಫೆಬ್ರವರಿ 26ರ ಮಧ್ಯೆ ಕಡಿರುದ್ಯಾವರ ಗ್ರಾಮದ ಎರ್ಮಾಳಪಲ್ಕೆ-ಮಠ ಎಂಬಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಾಲಕಿ 2022ರ ಮಾರ್ಚ್ ಮೂರರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರಾಧಾಕೃಷ್ಣ ಅವರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಮಂಗಳವಾರ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವೆಂಕಟ್ರಮಣ ಸ್ವಾಮಿ ವಾದಿಸಿದ್ದರು.

Similar News