ಕೇಂದ್ರ, ರಾಜ್ಯ ಸರಕಾರಗಳ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ ವಹಿಸಿ: ಅಧಿಕಾರಿಗಳಿಗೆ ಸಚಿವ ಅಂಗಾರ ಸೂಚನೆ

Update: 2023-01-25 18:26 GMT

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ವಿವಿಧ ಇಲಾಖೆಗಳಿಗೆ ಬರುವ ಅನುದಾನವನ್ನು  ಪೂರ್ಣವಾಗಿ ಬಳಕೆ ಮಾಡುವಂತೆ  ಹಾಗೂ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಉಡುಪಿ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಈ ಅವಧಿಯ ಕೊನೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ(ಕೆಡಿಪಿ) ಬಳಿಕ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.
ಪಿಡಬ್ಲ್ಯುಡಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗವೂ ಸೇರಿದಂತೆ ವಿವಿಧ ಇಲಾಖೆಗಳ ಎಲ್ಲಾ ಕಾಮಗಾರಿ ಹಾಗೂ ಯೋಜನೆಗಳನ್ನು ಮಾರ್ಚ್ ತಿಂಗಳೊಳಗೆ ಅನುಷ್ಠಾನಗೊಳಿಸುವಂತೆ ಹಾಗೂ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡುವಂತೆ ಸೂಚಿಸಲಾಯಿತು ಎಂದರು.

ಗ್ರಾಮೀಣ ಭಾಗಗಳಲ್ಲಿ ಮರಳು ಲಭ್ಯವಿರುವ ಸ್ಥಳಗಳನ್ನು ವಿಳಂಬವಿಲ್ಲೇ ಸಾಕಷ್ಟು ಮುಂಚಿತವಾಗಿ ಗುರುತಿಸಿಕೊಂಡು ಮಂಜೂರಾತಿಗೆ ಕ್ರಮಕೈಗೊಳ್ಳ ಬೇಕು. ಇದರಿಂದ ಮರಳು ಕೊರತೆಯ ಸಮಸ್ಯೆ ಬಗೆಹರಿಯಲು ಸಾಧ್ಯ. ಗ್ರಾಪಂ ಮಟ್ಟದಲ್ಲಿ ಶೀಘ್ರವಾಗಿ ಮರಳು ತೆರವುಗೊಳಿಸಿದಲ್ಲಿ ಮನೆ ನಿರ್ಮಾಣವೂ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಡಲಾಯಿತು ಎಂದರು.

ಮೀನುಗಾರಿಕಾ ಮನೆಗಳಿಗೆ ಸಹಾಯಧನದ ಮೊತ್ತ ಒಂದು ಲಕ್ಷರೂ.ನಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲು ಪ್ರಸ್ತಾಪವನ್ನು ಸರಕಾರಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ. ವಿವೇಕ ಯೋಜನೆಯಡಿ 27.47 ಕೋಟಿ ರೂ.ವೆಚ್ಚದಲ್ಲಿ ಮಂಜೂರಾದ 108 ಶಾಲಾ ಕೊಠಡಿಗಳ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ಅಂಗಾರ ನುಡಿದರು.

ಗ್ರಾಮೀಣ ವಸತಿ ಯೋಜನೆಯಡಿ ಸರಕಾರದಿಂದ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚುವರಿಯಾಗಿ 4000 ಮನೆಗಳ ಗುರಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಮನೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕೆಂದು ತಿಳಿಸಲಾಗಿದೆ.ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಎಲ್ಲಾ ಕಾಮಗಾರಿಗಳನ್ನು ಮಾರ್ಚ್‌ನೊಳಗೆ ಮುಗಿಸಲು ತಿಳಿಸಲಾಯಿತು ಎಂದರು.

468 ಕಾಲುಸಂಕ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿದ್ದು, ಇದರಲ್ಲಿ 42 ಕಾಮಗಾರಿಗಳು ಬಾಕಿ ಇವೆ. ಅದೇ ರೀತಿ ಗ್ರಾಮಬಂಧು ಯೋಜನೆಯಡಿ 404 ಕಾಮಗಾರಿಗಳಲ್ಲಿ 136 ಪೂರ್ಣ ಗೊಂಡಿದ್ದು, ಮಳೆಗಾಲದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ನುಡಿದರು.

ಸಭೆಯಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಪಂ ಸಿಇಓ ಪ್ರಸನ್ನ ಎಚ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಹಾಕೆ ಅಕ್ಷಯ್ ಮಚ್ಚಿಂದ್ರ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Similar News