ಪುತ್ತೂರು ತಾಲೂಕು ಮಟ್ಟದ ಗಣರಾಜ್ಯೋತ್ಸವ

Update: 2023-01-26 09:39 GMT

ಪುತ್ತೂರು: ಹಲವು ಭಾಗಗಳಾಗಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಟ್ಟುಗೂಡಿಸುವ ಮೂಲಕ ಹಾಗೂ ಭಾಷೆ, ಪಂಗಡಗಳನ್ನು ಮೀರಿ ದೇಶವನ್ನು ಒಂದಾಗಿಸುವಲ್ಲಿ ನಮ್ಮ ಹಿರಿಯ ಪರಿಶ್ರಮ ತುಂಬಾ ಇದೆ. ಇದಕ್ಕಾಗಿ ಶ್ರಮ ವಹಿಸಿದ ನಮ್ಮ ಪೂರ್ವಜರನ್ನು ಮರೆಯದಿರೋಣ ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು.

ಅವರು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ‘ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿ ಮಾತನಾಡಿದರು.

ನಮ್ಮ ಸಂವಿಧಾನವು ನಮಗೇ ಅರ್ಪಣೆಗೊಂಡಿದೆ. ಸಂವಿಧಾನ ಅರ್ಪಿತವಾಗಿ 7 ದಶಕಗಳು ಕಳೆದಿವೆ. ಇದೀಗ ದೇಶವು ಶೈಕ್ಷಣಿಕ, ವಿಜ್ಞಾನ, ತಂತ್ರಜ್ಞಾನ ಇನ್ನಿತರ ಕ್ಷೇತ್ರಗಳಲ್ಲಿ ಸಾಕಷ್ಟು ಬೆಳವಣಿಗೆ ಕಂಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಭಾರತೀಯರು ತಮ್ಮ ಹಕ್ಕುಗಳ ಜೊತೆಗೆ ತಮ್ಮ ಕರ್ತವ್ಯಗಳನ್ನೂ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಪ್ರಜಾಪ್ರಭುತ್ವಕ್ಕೆ ನೈಜತೆಯನ್ನು ಪಡೆಯಲಿದೆ. ಜಿ.20ಯ ನಾಯಕತ್ವ ವಹಿಸಿಕೊಂಡಿರುವ ಭಾರತವು ತನ್ನ ಸ್ಥಾನಮಾನವನ್ನು ಹೆಚ್ಚಿಸಿಕೊಂಡಿದೆ. ರಾಷ್ಟ್ರಭಕ್ತಿಯೊಂದಿಗೆ ರಾಷ್ಟ್ರೋತ್ಥಾನದ ಕಡೆಗೆ ದೇಶವು ಸಾಗುತ್ತಿದ್ದು ಜಗದ್ಗುರುವಾಗುತ್ತಿದೆ ಎಂದರು.

ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಪುತ್ತೂರು ಉಪವಿಭಾಗದ ಪೊಲೀಸ್ ಅಧೀಕ್ಷಕ ವೀರಯ್ಯ ಹಿರೇಮಠ್ ಮಾತನಾಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅತಿಥಿಗಳೆಲ್ಲರೂ ಮಹಾತ್ಮ ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಭಾ ಕಾರ್ಯಕ್ರಮದಲ್ಲಿ ನೌಕಾ ಸೇನೆಯ ಸಿಬ್ಬಂದಿಯಾದ ರಾಷ್ಟ್ರೀಯ ಈಜು ಪಟು ಪುತ್ತೂರಿನ ವೈಷ್ಣವ್ ಹೆಗ್ಡೆ, ಗ್ರಾಮ 1 ಕೇಂದ್ರದ ನೇತೃತ್ವ ವಹಿಸಿ ಅತೀ ಹೆಚ್ಚು ಅರ್ಜಿ ವಿಲೇವಾರಿ ಮಾಡಿರುವ ಮುಸ್ತಫಾ, ಅಶೋಕ್ ಎಚ್ ಮತ್ತು ಭವಿಷ್ಯ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದಿರುವ ನಾಲ್ವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಹಶೀಲ್ದಾರ್ ನಿಸರ್ಗಪ್ರಿಯ ಜೆ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಂದರ ಗೌಡ, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಲೋಕೋಪಯೋಗಿ ಇಲಾಖೆಯ ಎಇಇ ರಾಜಾರಾಮ್, ಸಿಡಿಪಿಒ ಶ್ರೀಲತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ಉಪತಹಸೀಲ್ದಾರ್ ಸುಲೋಚನಾ ಸೇರಿಂದತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಂದಿಸಿದರು.

ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ನಗರ ಠಾಣೆಯ ಎಸ್‌ಐ ಶ್ರೀಕಾಂತ್ ರಾಥೋಡ್ ನೇತೃತ್ವದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಂದರ ಗೌಡ ಅವರ ಸಂಯೋಜನೆಯಲ್ಲಿ ನಡೆದ ಪಥ ಸಂಚಲನ ನಡೆಯಿತು.

 ಪುತ್ತೂರಿನ ಪೊಲೀಸ್ ಘಟಕ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ವಿವಿಧ ಕಾಲೇಜ್, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಎನ್‌ಸಿಸಿ, ಆರ್ಮಿ, ಏರ್‌ವಿಂಗ್, ನೇವಿ,ಸೇವಾದಳ, ಸ್ಕೌಟ್ಸ್ & ಗೈಡ್ಸ್ ಘಟಕಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿತ್ತು. ಸಭಾ ಕಾರ್ಯಕ್ರಮದ ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 

Similar News