ಪೇಶಾವರ ಮಸೀದಿಯಲ್ಲಿ ಬಾಂಬ್‌ ಸ್ಫೋಟ: 46 ಮಂದಿ ಮೃತ್ಯು, 100 ಕ್ಕೂ ಅಧಿಕ ಗಾಯ

Update: 2023-01-30 14:26 GMT

ಪೇಶಾವರ: ಪಾಕಿಸ್ತಾನದ ವಾಯುವ್ಯ ಪೇಶಾವರ ನಗರದಲ್ಲಿ ಸೋಮವಾರ ಮಧ್ಯಾಹ್ನದ ನಮಾಝ್ ವೇಳೆ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಪೊಲೀಸರು, ಭದ್ರತಾ ಸಿಬ್ಬಂದಿಗಳು ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಮಧ್ಯಾಹ್ನ 1.40 ರ ಸುಮಾರಿಗೆ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಳಗೆ ಪೊಲೀಸ್, ಸೇನೆ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಸೇರಿದಂತೆ ನೂರಾರು ಮಂದಿ ನಮಾಝ್‌ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಮುಂದಿನ ಸಾಲಿನಲ್ಲಿದ್ದ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ಲೇಡಿ ರೀಡಿಂಗ್ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.  

ಇದು ಕಳೆದ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಕೊಲ್ಲಲ್ಪಟ್ಟ ತನ್ನ ಸಹೋದರನ ಸಾವಿಗೆ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಕೊಲ್ಲಲ್ಪಟ್ಟ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿಯ ಸಹೋದರ ಹೇಳಿದ್ದಾನೆ ಎಂದು ವರದಿಯಾಗಿದೆ.

ಮಸೀದಿಯ ಒಂದು ಭಾಗ ಕುಸಿದಿದೆ. ಹಲವಾರು ಮಂದಿ ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಸ್ಫೋಟದ ಸಮಯದಲ್ಲಿ 300 ರಿಂದ 400 ಪೊಲೀಸ್ ಅಧಿಕಾರಿಗಳು ಪ್ರದೇಶದಲ್ಲಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Similar News