ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ತನಿಖೆ ಪೂರ್ಣವಾಗಿದೆ ಎಂದು ಬಾಂಬೆ ಹೈಕೋರ್ಟ್ ಗೆ ತಿಳಿಸಿದ ಸಿಬಿಐ

Update: 2023-01-30 16:53 GMT

ಮುಂಬೈ, ಜ. 30: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ತನಿಖಾಧಿಕಾರಿಗಳು ಮುಕ್ತಾಯ ವರದಿಯನ್ನು ಸಂಬಂಧಿತ ಪ್ರಾಧಿಕಾರಕ್ಕೆ ಸಲ್ಲಿಸಿದ್ದಾರೆ ಎಂದು ಸಿಬಿಐ ಸೋಮವಾರ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. 

ಆದರೆ, ದಾಭೋಲ್ಕರ್ ಅವರ ಪುತ್ರಿಯನ್ನು ಪ್ರತಿನಿಧಿಸಿದ್ದ ವಕೀಲರು, ಸಿಬಿಐ ಪ್ರಕರಣವನ್ನು ಸಮರ್ಪಕವಾಗಿ ತನಿಖೆ ನಡೆಸಿಲ್ಲ. ಅದರಲ್ಲಿರುವ ಹಲವು ಲೋಪ ದೋಷಗಳ ಬಗ್ಗೆ ಇನ್ನಷ್ಟೇ ತನಿಖೆ ನಡೆಯಬೇಕಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿಯ ಸ್ಥಾಪಕ ದಾಭೋಲ್ಕರ್ (67) ಅವರು ಪುಣೆಯಲ್ಲಿ 2013 ಆಗಸ್ಟ್ 20ರಂದು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂಲಭೂತವಾದಿ ಸಂಘಟನೆ ಸನಾತನ ಸಂಸ್ಥೆಯೊಂದಿಗೆ ನಂಟು ಹೊಂದಿವರೆಂದು ಹೇಳಲಾದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. 

ಈ ಪ್ರಕರಣದಲ್ಲಿ ಸಿಬಿಐ ಇದುವರೆಗೆ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಸ್ಥಿತಿಗತಿಯನ್ನು ಸಿಬಿಐಯಿಂದ ತಿಳಿಯ ಬಯಸುವುದಾಗಿ ಉಚ್ಚ ನ್ಯಾಯಾಲಯ ಈ ತಿಂಗಳ ಆರಂಭದಲ್ಲಿ ಸೂಚಿಸಿತ್ತು. ಸಿಬಿಐ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಅನಿಲ್ ಸಿಂಗ್ ಪ್ರಕರಣದ ತನಿಖೆಯನ್ನು ಸಿಬಿಐ ಪೂರ್ಣಗೊಳಿಸಿದೆ ಎಂದು ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಹಾಗೂ ಪಿ.ಡಿ. ನಾಯ್ಕಾ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ತಿಳಿಸಿದರು.

Similar News