​ಮಾಚೀದೇವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2023-02-01 14:48 GMT

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ, ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂಬುದನ್ನು ನಾವು ಅರಿತುಕೊಳ್ಳಬೇಕಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ ಮಾಚೀದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತಿದ್ದರು.

ಒಂದು ಕಾಲದಲ್ಲಿ ಬಡವರಿಗೆ ಶಿಕ್ಷಣ ಇರಲಿಲ್ಲ. ಅಸ್ಪಶ್ಯತೆಯನ್ನು ಅನುಭಸುತ್ತಿದ್ದರು. ಸಮಾಜದಲ್ಲಿ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಖಚಿತವಾದ ವ್ಯವಸೆ ಇಲ್ಲದೇ ಬಳಲುತ್ತಿದ್ದರು. ಸಮಾಜದಲ್ಲಿರುವ ಬಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಒದಗಿಸುವ ಮೂಲಕ ಅವರು ತಮ್ಮ ಕಾಲ ಮೇಲೆ ತಾವು ನಿಲ್ಲುವ ಹಾಗೆ ಒಳ್ಳೆಯ ಸಂಸ್ಕಾರವನ್ನು ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಆರ್ಥಿಕ ಅಭಿವೃದ್ಧಿಗೆ 25 ಲಕ್ಷರೂ.ಗಳನ್ನು ಬಿಡುಗಡೆ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, 12ನೇ ಶತಮಾನದಲ್ಲಿ ಮಡಿವಾಳ ಮಾಚೀದೇವ ಅವರು ಅಸಮಾನತೆ ಮತ್ತು ಶೋಷಣೆಯ ಕುರಿತಂತೆ ತಮ್ಮ ಸಾಹಿತ್ಯದ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದಾರೆ. ಯಾವುದೇ ಸಮುದಾಯ, ವರ್ಗದವರಾದರೂ ಸಮಾಜ ದಲ್ಲಿ ಅವರು ಯಶಸ್ಸು ಕಾಣಬೇಕಾದರೆ, ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿರಬೇಕು ಎಂದರು.

ರಜಕ ಯಾನೆ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ಮಡಿವಾಳ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಭಾರತಿ ಚಂದ್ರಶೇಖರ್ ವಂದಿಸಿದರು.

Similar News