​ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Update: 2023-02-02 13:49 GMT

ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ವರ್ಷಾಚರಣೆಯ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಫೆ.11ರಂದು ಪುತ್ತೂರಿಗೆ ಆಗಮಿಸಿ ಮಧ್ಯಾಹ್ನ 2:30ಕ್ಕೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತವ ವರ್ಷಾಚರಣೆಗೆ ಚಾಲನೆ ನೀಡುವರು. ಅದಲ್ಲದೆ ಅವರು ವಿವಿಧ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಹಾಗಾಗಿ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಮಿತ್ ಶಾ ನಾಲ್ಕು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇ ಸಂಬಂಧಿತ ಕಾಮಗಾರಿ ನಡೆಯುತ್ತಿರುವುದರಿಂದ ಅವರು ಹೈದರಾಬಾದ್‌ನಿಂದ ಮಧ್ಯಾಹ್ನ 12ಕ್ಕೆ ಹೊರಟು 1:10 ಗಂಟೆಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 1:25ಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹೊರಟು 1:50ಕ್ಕೆ ಈಶ್ವರಮಂಗಲ ಹೆಲಿಪ್ಯಾಡ್‌ನಲ್ಲಿ ಇಳಿಯುವರು. 1:30ರಿಂದ 2:30ರ ವರೆಗೆ ಈಶ್ವರಮಂಗಲದಲ್ಲಿದ್ದು, ಭಾರತ್‌ಮಾತಾ ಮಂದಿರ ಉದ್ಘಾಟನೆಗೈಯುವರು. ಬಳಿಕ ಪಂಚಮುಖಿ ಆಂಜನೇಯ ದೇವಸ್ಥಾನ ಸಂದರ್ಶಿಸುವರು.

ಅಲ್ಲಿಂದ 2:35ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೊರಟು 2:45ಕ್ಕೆ ಪುತ್ತೂರಿನ ಫಿಲೋಮಿನಾ ಕಾಲೇಜಿನ ಹೆಲಿಪ್ಯಾಡ್‌ಗೆ ಆಗಮಿಸಿ ರಸ್ತೆ ಮೂಲಕ ತೆಂಕಿನ ಬೈಪಾಸ್‌ನ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ಸಮಾವೇಶಕ್ಕೆ ತೆರಳುವರು. ಪುತ್ತೂರಿನಲ್ಲಿ ಅಪರಾಹ್ನ 3ರಿಂದ 5:30ರವರೆಗೆ ಇರಲಿದ್ದು, ಈ ವೇಳೆ ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಚಾಲನೆ, ವಿವಿಧ ಉತ್ಪನ್ನಗಳ ಉದ್ಘಾಟನೆ, ಕಾಮಗಾರಿ ಶಿಲಾನ್ಯಾಸ, ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೆ ಭೇಟಿ ನೀಡುವರು. 5:30ಕ್ಕೆ ಹೆಲಿಕಾಪ್ಟರ್ ಮೂಲಕ ಕಣ್ಣೂರಿಗೆ ತೆರಳಿ ಅಲ್ಲಿಂದ ದೆಹಲಿಗೆ ನಿರ್ಗುಸುವರು ಎಂದು ಸಂಸದರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಶಾಸಕ ಸಂಜೀವ ಮಠಂದೂರು, ಜಿಪಂಸಿಇಒ ಡಾ.ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕ್ಯಾಂಪು ಸಂಸ್ಥೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Similar News