ವಿಧಾನಸಭಾ ಚುನಾವಣೆ: ಫೆ.15ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Update: 2023-02-02 15:14 GMT

ಬೆಂಗಳೂರು, ಫೆ.2: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಪಕ್ಷದ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೆ.15ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಗುರುವಾರ ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ಕೆಪಿಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳನ್ನು ಯಾವ ಮಾನದಂಡದಲ್ಲಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಎಐಸಿಸಿ ಕೊಟ್ಟಿರುವ ನಿರ್ದೇಶನದ ಬಗ್ಗೆ ಗೊತ್ತಿಲ್ಲ. ಆದರೆ, ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದರು.

ಹೊಸದಿಲ್ಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪರಿಶೀಲನಾ ಸಮಿತಿ (ಸ್ಕ್ರೀನಿಂಗ್) ಸಭೆಯಲ್ಲಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬುದು ಅಂತಿಮವಾಗುತ್ತದೆ. ನಾವು ಪ್ರತಿಯೊಂದು ಕ್ಷೇತ್ರದಿಂದ ಎರಡರಿಂದ ಮೂರು ಹೆಸರುಗಳನ್ನು ಎಐಸಿಸಿಗೆ ಕಳುಹಿಸಿಕೊಡಬೇಕು ಎಂದು ತೀರ್ಮಾನ ಮಾಡಿದ್ದು, ಅದೇ ರೀತಿಯಲ್ಲಿ ಪಟ್ಟಿ ಅಂತಿಮಗೊಳಿಸಲಾಗಿದೆ ಎಂದು ಅಲ್ಲಂ ವೀರಭದ್ರಪ್ಪ ತಿಳಿಸಿದರು.

ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

Similar News