ಸದ್ಯ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೊಳಿಸುವ ಯಾವುದೇ ನಿರ್ಧಾರ ಮಾಡಿಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

Update: 2023-02-03 06:59 GMT

ಹೊಸ ದಿಲ್ಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸರ್ಕಾರವು ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು (Kiren Rijiju) ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

"ಸರ್ಕಾರಕ್ಕೇನಾದರೂ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಅನುಮೋದನೆ ಪಡೆಯುವ ಇರಾದೆ ಇದೆಯೇ?" ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, "ಕೇಂದ್ರ ಕಾನೂನು ಆಯೋಗದಿಂದ ಸ್ವೀಕರಿಸಿರುವ ಮಾಹಿತಿಯ ಪ್ರಕಾರ, ಏಕರೂಪ ನಾಗರಿಕ ಸಂಹಿತೆಯ ವಿಚಾರವನ್ನು 22ನೇ ಕಾನೂನು ಆಯೋಗವು ಪರಿಗಣನೆಗೆ ತೆಗೆದುಕೊಳ್ಳಲಿದೆ. ಹೀಗಾಗಿ, ಸದ್ಯ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಹೇಳಿದ್ದಾರೆ.

ಇದಲ್ಲದೆ, ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳನ್ನು ಆಧರಿಸಿ ಶಿಫಾರಸು ಮಾಡುವಂತೆ 21ನೇ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಹೀಗಿದ್ದೂ, ಆಗಸ್ಟ್ 31, 2018ಕ್ಕೇ ಕೇಂದ್ರ ಕಾನೂನು ಆಯೋಗದ ಅವಧಿ ಮುಕ್ತಾಯಗೊಂಡಿದೆ ಎಂದು ಅವರು ರಾಜ್ಯಸಭೆಗೆ ಮಾಹಿತಿ ನೀಡಿದರು.

Similar News