PSI ಹಗರಣ: 1,300ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ ಸಿಐಡಿ

Update: 2023-02-03 14:51 GMT

ಬೆಂಗಳೂರು, ಫೆ. 3: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಇಲ್ಲಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ ಸಿಐಡಿ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ(ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. 

ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇರಿದಂತೆ ಒಟ್ಟು 8 ಮಂದಿ ಆರೋಪಿಗಳ ವಿರುದ್ಧ 1,300ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 8 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿ 37 ಮಂದಿ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ. 

ಪ್ರಕರಣದ ಮೊದಲ ಆರೋಪಿ ಕುಶಾಲ್ ಕುಮಾರ್, ಮಧ್ಯವರ್ತಿ ದರ್ಶನ್ ಗೌಡ, ಮೈಸೂರಿನ ರಿಸರ್ವ್ ಪೊಲೀಸ್ ಇನ್ಸ್‍ಪೆಕ್ಟರ್ (ಆರ್‍ಪಿಐ) ಮಧು, ನೇಮಕಾತಿ ವಿಭಾಗದ ಸಿಬ್ಬಂದಿ ಹರ್ಷ, ಶ್ರೀಧರ್, ಶ್ರೀನಿವಾಸ್, ಡಿವೈಎಸ್ಪಿ ಶಾಂತಕುಮಾರ್ ಹಾಗೂ 8ನೆ ಆರೋಪಿಯಾಗಿ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ಈಗಾಗಲೇ ಹೈಗ್ರೌಂಡ್ಸ್ ಠಾಣೆಯಲ್ಲಿ ಸುಮಾರು 3,065 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು. ನಂತರ ಹೆಚ್ಚುವರಿಯಾಗಿ 1,406 ಪುಟಗಳ ಚಾರ್ಜ್ ಶೀಟ್‍ನಲ್ಲಿ ಎಡಿಜಿಪಿ ಅವರ ಪಾತ್ರದ ಬಗ್ಗೆ ಉಲ್ಲೇಖಿಸಿ 1ನೆ ಎಸಿಎಂಎಂ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Similar News