ಎಚ್‍ಡಿಕೆ ವಿರುದ್ಧದ ಭೂ ಕಬಳಿಕೆ ಪ್ರಕರಣ | ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ನಿಗದಿಯ ಎಚ್ಚರಿಕೆ ನೀಡಿದ ಹೈಕೋರ್ಟ್

Update: 2023-02-04 14:55 GMT

ಬೆಂಗಳೂರು, ಫೆ.4: ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ ವಿರುದ್ಧ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿನ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ನ್ಯಾಯಾಲಯದ ಆದೇಶ ಕುರಿತು ಅನುಪಾಲನಾ ವರದಿ ಸಲ್ಲಿಸದಿದ್ದರೆ ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ನಿಗದಿ ಮಾಡಲಾಗುವುದು ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.  

ಭೂಕಬಳಿಕೆ ಕೇಸ್‍ಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರಕಾರದ ನಡೆ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ನಡೆಸಿತು.  

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸರ್ವೆ ನಂ. 7, 8, 9, 10, 16, 17 ಮತ್ತು 79ರಲ್ಲಿ ಮಂಜೂರಾಗಿರುವ ಗೋಮಾಳದ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಸ್ತøತ ತನಿಖೆ ನಡೆಸಬೇಕು. ಒಂದೊಮ್ಮೆ ಆ ಭೂಮಿ ಒತ್ತುವರಿಯಾಗಿದ್ದರೆ ಅದನ್ನು ಒತ್ತುವರಿ ಮಾಡಿಕೊಂಡಿರುವವರಿಂದ ಸರಕಾರಿ ಭೂಮಿ ವಾಪಸ್ ಪಡೆಯಲು ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. 

ಸರಕಾರದ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿರುವವರು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕೈಗೊಳ್ಳಬೇಕು. ನಾಲ್ಕು ತಿಂಗಳಲ್ಲಿ ಈ ಕ್ರಮವಾಗಬೇಕು. ಆನಂತರ 15 ದಿನಗಳಲ್ಲಿ ರಿಜಿಸ್ಟ್ರಾರ್‍ಗೆ ಅನುಪಾಲನಾ ವರದಿ ಸಲ್ಲಿಸುವಂತೆ ಲೋಕಾಯುಕ್ತರು 2014ರ ಆ.4ರಂದು ಆದೇಶಿಸಿದ್ದರು. ಇದನ್ನು ಕರ್ನಾಟಕ ಹೈಕೋರ್ಟ್‍ನ ವಿಭಾಗೀಯ ಪೀಠವು ಎತ್ತಿ ಹಿಡಿದಿತ್ತು. ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ.
 

Similar News