ಗ್ರಾಮ ಸಹಾಯಕರನ್ನು ‘ಡಿ’ ಗ್ರೂಪ್ ನೌಕರರನ್ನಾಗಿ ಪರಿಗಣಿಸಲು ಆಗ್ರಹ

Update: 2023-02-04 17:58 GMT

ಬೆಂಗಳೂರು, ಫೆ.4: ರಾಜ್ಯ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ‘ಡಿ’ ಗ್ರೂಪ್ ನೌಕರರನ್ನಾಗಿ ಪರಿಗಣಿಸಿ, ಕನಿಷ್ಠ ವೇತನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಕೇಂದ್ರ ಸಂಘದ ರಾಜ್ಯ ಘಟಕ ಅಧ್ಯಕ್ಷ ಎಚ್.ಎನ್. ದೇವರಾಜು ಆಗ್ರಹಿಸಿದ್ದಾರೆ.

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 10,450 ನೌಕರರು ಸುಮಾರು 44 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 13 ಸಾವಿರ ರೂಪಾಯಿ ಕನಿಷ್ಠ ವೇತನ ನೀಡಲಾಗುತ್ತಿದೆ. ಈ ದುಬಾರಿ ಸಮಾಜದಲ್ಲಿ ಈ ಕನಿಷ್ಠ ವೇತನಕ್ಕೆ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮ ಸಹಾಯಕರಲ್ಲಿ ಶೇ.80ರಷ್ಟು ವಿದ್ಯಾವಂತರಾಗಿದ್ದು, ವಿಧ್ಯೆಗೆ ತಕ್ಕಂತಹ ಹುದ್ದೆಯಾಗಲಿ ಅಥವಾ ವೇತನ ಶ್ರೇಣಿಯನ್ನು ನೀಡುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ, ಈ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್‍ನಲ್ಲಿ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡುವುದರ ಜತೆಗೆ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ಅನಿರ್ದಿಷ್ಟವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ, ಮರಲಿಂಗ ವಿ.ಹೊಸಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Similar News