ಬೆಂಗಳೂರು: ಗ್ರಾ.ಪಂ. ನೌಕರರನ್ನು ‘ಸಿ, ಡಿ’ ಗ್ರೂಪ್‍ಗೆ ಸೇರಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ

Update: 2023-02-06 14:49 GMT

ಬೆಂಗಳೂರು, ಫೆ.6: ಗ್ರಾಮ ಪಂಚಾಯತಿಯ ನೌಕರರನ್ನು ‘ಸಿ’ ಮತ್ತು ‘ಡಿ’ ಗ್ರೂಪ್ ಹುದ್ದೆಗಳಿಗೆ ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸೋಮವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಇದೇ ವೇಳೆ ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಳ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಇಲಾಖೆಯ ಅಭಿವೃದ್ಧಿಗೆ ಮೂರು ದಶಕಗಳಿಂದ ಹಗಲಿರುಳು ದುಡಿಯುತ್ತಿದ್ದಾರೆ. ಗ್ರಾಮ ಪಂಚಾಯಿತಿ ನೌಕರರಾದ ಬಿಲ್ ಕಲೆಕ್ಟರ್, ಡಿಇಓಗಳಿಗೆ ‘ಸಿ’ ದರ್ಜೆ ಸ್ಥಾನಮಾನ ನೀಡಬೇಕು. ಮತ್ತು ಅಟೆಂಡರ್, ಕ್ಲೀನರ್, ವಾಟರ್ ಹಾಗೂ ಪಂಪು ಚಾಲಕ ಮುಂತಾದವರಿಗೆ ‘ಡಿ’ ದರ್ಜೆ ಸ್ಥಾನಮಾನ ನೀಡಬೇಕು. ನಗರ ಮತ್ತು ಪಟ್ಟಣ ಪಂಚಾಯತ್‍ನಂತೆ ಸೇವಾನಿಯಮಾವಳಿ ಮಾಡಬೇಕು. ನೌಕರರಿಗೆ ಕನಿಷ್ಠ ವೇತನ ಬದಲು ವೇತನ ಶ್ರೇಣಿ ನಿಗದಿಪಡಿಸಬೇಕು ಮತ್ತು ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಇತರ ಸಮಸ್ಯೆಗಳನ್ನು ಬಗೆಹರಿಸಬೇಕು ಜಿಲ್ಲಾ ಪಂಚಾಯಿತಿ ಅನುಮೋದನೆಯಾಗದೇ ನಿವೃತ್ತಿಯಾದ ಎಲ್ಲಾ ಗ್ರಾಮ ಪಂಚಾಯಿತಿ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು ಎಂದ ಅವರು, ಈ ಹಿಂದೆ 2022ರ ಡಿಸೆಂಬರ್‍ನಲ್ಲಿ ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವರು ಅಧಿವೇಶನದಲ್ಲಿ ಚರ್ಚಿಸಿ ಬೇಡಿಕೆಗಳ ಅನುಸಾರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಆದರೆ, ಸರಕಾರ ಯಾವುದೇ ಸ್ಪಂದನೆ ನೀಡದೆ, ಧೋರಣೆಯನ್ನು ಅನುಸರಿಸಿ ಪಂಚಾಯಿತಿ ನೌಕರರ ಅಸಮಾಧಾನಕ್ಕೆ ಗುರಿಯಾಗಿದ್ದು, ಈವರೆಗೂ ಬೇಡಿಕೆ ಈಡೇರಿಸದಿರುವ ಕಾರಣ, ಎಲ್ಲ ನೌಕರರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕುಲಾಲ್, ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಪ್ರಶಾಂತ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಅಶ್ರಫ್, ಉತ್ತರ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಗಂಗಾಧರ ನಾಯ್ಕ, ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಎ.ಸಿ.ಜಯಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ದಯಾನಂದ, ರಾಮನಗರ ಜಿಲ್ಲಾ ಉಸ್ತುವಾರಿ ಕೆ ದಿನೇಶ್, ಚಿಕ್ಕಮಗಳೂರು ಉಸ್ತುವಾರಿ ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Similar News