BMS ಹಗರಣದ ರೂವಾರಿಗಳೊಂದಿಗೆ ಸಚಿವ ಅಶ್ವತ್ಥನಾರಾಯಣ ಶಾಮೀಲು: ಎಚ್‍ಡಿಕೆ ಆರೋಪ

ಫೋಟೊ ಬಿಡುಗಡೆ ಮಾಡಿದ ಮಾಜಿ ಸಿಎಂ

Update: 2023-02-07 16:44 GMT

ಬೆಂಗಳೂರು, ಫೆ. ಬಿಎಂಎಸ್ ಟ್ರಸ್ಟ್ ಹಗರಣದ ರೂವಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇರ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಗಳವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು, ಬಿಎಂಎಸ್ ಟ್ರಸ್ಟ್ ಅನ್ನು ಹೈಜಾಕ್ ಮಾಡುತ್ತಿರುವ ಉದ್ಯಮಿ ದಯಾನಂದ ಪೈ ಹಾಗೂ ಸಚಿವ ಅಶ್ವತ್ಥನಾರಾಯಣ ಇಬ್ಬರೂ ಕುಟುಂಬ ಸಮೇತ ನಿಕಟವಾಗಿ ಆಪ್ತ ಮಾತುಕತೆಯಲ್ಲಿ ತೊಡಗಿರುವ ಫೋಟೋ ಒಂದನ್ನು ಬಿಡುಗಡೆ ಮಾಡಿದರು.

ಬಳಿಕ ಅವರು, ಬಿಎಂಎಸ್ ಟ್ರಸ್ಟ್ ಸರಕಾರದ ಸ್ವತ್ತು. ಅದು ಖಾಸಗಿಯವರ ಪಾಲಾಗಲು ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಜೆಡಿಎಸ್ ಸರಕಾರ ಬಂದರೆ ಆ ಟ್ರಸ್ಟ್ ಅನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬಿಎಂಎಸ್ ಟ್ರಸ್ಟ್ ಅನ್ನು ಖಾಸಗಿ ಶಕ್ತಿಗಳ ಪಾಲಾಗುವಲ್ಲಿ ಸಚಿವ ಅಶ್ವತ್ಥನಾರಾಯಣ ಪಾತ್ರ ದೊಡ್ಡದು. ಅದಕ್ಕೆ ಈ ಫೋಟೋ ಕೂಡ ಒಂದು ಸಾಕ್ಷಿ. ಈಗಾಗಲೇ ನಾನು ಸದನದಲ್ಲಿ ಅನೇಕ ಮಹತ್ವದ ಸಾಕ್ಷ್ಯಗಳನ್ನು ಮಂಡಿಸಿದ್ದೇನೆ. ಆದರೆ, ಸರಕಾರ ತನಿಖೆಗೆ ಒಪ್ಪಲಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ ಸೇರಿದಂತೆ ಪ್ರಮುಖರಿದ್ದರು.

Similar News