ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

Update: 2023-02-08 12:08 GMT

ಭದ್ರಾವತಿ: ‘ಬಿಜೆಪಿ ನಾಯಕರು ಕೊಟ್ಟ  ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಕೇವಲ ಅರ್ಧ ಗಂಟೆಯಲ್ಲಿ ತೀರ್ಮಾನ ಮಾಡಬಹುದು. ಆದರೆ ಈ ಬಗ್ಗೆ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಭದ್ರಾವತಿಯಲ್ಲಿ ಪ್ರಜಾಧ್ವನಿ ಸಮಾವೇಶಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ನಾವು ಮಲೆನಾಡು ಭಾಗಕ್ಕೆ ಬಂದಿದ್ದು, ಶಿವಮೊಗ್ಗ, ಭದ್ರಾವತಿಯಲ್ಲಿ ಮಾತ್ರ ನಮ್ಮ ಪಕ್ಷದ ಶಾಸಕರಾಗಿದ್ದಾರೆ. ಕಳೆದ ಚುನಾವಣೆ ನಂತರ ತೀರ್ಥಹಳ್ಳಿಯ ಮಂಜುನಾಥ್ ಗೌಡ, ಸೊರಬದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ ಸರ್ಕಾರವಿದೆ. ಈ ಜಿಲ್ಲೆ ಬಹಳ ನಾಯಕರನ್ನು ನೀಡಿದೆ. ರಾಜ್ಯದ ಗೃಹ ಸಚಿವರು ಈ ಜಿಲ್ಲೆಯವರು. ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ ಎಂದು ಕಿಡಿಕಾರಿದರು. 

'ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್ಎಲ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹೋದಾಗ, ಸಿದ್ದರಾಮಯ್ಯ ಅವರ ಸರ್ಕಾರವಿತ್ತು. ಆಗ ಸಂಗಮೇಶ್ ಅವರು ಮಾಜಿ ಶಾಸಕರಾಗಿದ್ದರೂ ಈ ಕಾರ್ಖಾನೆಗೆ ಗಣಿ ಜಾಗ ಮಂಜೂರು ಮಾಡಿಸಿದ್ದರು. ಆದರೂ ಕೇಂದ್ರ ಸರ್ಕಾರ ಈ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ ಮತ್ತೆ ಆರಂಭಕ್ಕೆ ಆದ್ಯತೆ ನೀಡಲಿಲ್ಲ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು 1 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದರು. ನಂತರ ಕೇಂದ್ರ ಸಚಿವರು ಬಂದು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ನೀಡುವುದಾಗಿ ಹೇಳಿದ್ದರು. ಇದ್ಯಾವುದನ್ನು ಮಾಡಲಿಲ್ಲ. ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದರು.

'ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ' ಎಂದು ಆತಂಕ ವ್ಯಕ್ತಪಡಿಸಿದರು. 

Similar News