SDPI ಕಚೇರಿಗಳ ಮೇಲೆ ದಾಳಿಯ ದಾಖಲೆ ನೀಡಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

Update: 2023-02-08 12:19 GMT

ಬೆಂಗಳೂರು, ಫೆ.8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್‌ಡಿಪಿಐ(ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ)ಗೆ ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿ ನಡೆಸಲು ಕೇಂದ್ರ ಸರಕಾರ ನೀಡಿರುವ ಸೂಚನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. 

ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿಕೊಂಡಿರುವ ಸ್ವತ್ತುಗಳಿಗೆ ಹಾಕಲಾಗಿರುವ ಸೀಲ್(ಮೊಹರು) ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನಿರ್ದೇಶಿಸುವಂತೆ ಕೋರಿ ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇರುವ ಎಸ್‌ಡಿಪಿಐನ 17 ಕಚೇರಿಗಳಿಗೆ ಸೀಲ್ ಹಾಕಲಾಗಿದೆ. ಚುನಾವಣೆಗೆ ಸಿದ್ಧತೆ ನಡೆಸಲು ಸೀಲ್‌ಗಳನ್ನು ತೆರವು ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. 

ಸರಕಾರದ ಪರ ವಕೀಲ ವಿನೋದ್‌ಕುಮಾರ್ ಅವರು, ಕೇಂದ್ರ ಸರಕಾರದ ನಿರ್ದೇಶನದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಚೇರಿಗಳ ಮೇಲೆ ದಾಳಿ ನಡೆಸಿ ಸೀಲ್ ಹಾಕಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. 

ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ ಸರಕಾರ ನೀಡಿರುವ ಸೂಚನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿತು.

Similar News