ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Update: 2023-02-10 12:27 GMT

ಬೆಂಗಳೂರು, ಫೆ.9: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಫೆ.24ರವರೆಗೆ ಮಧ್ಯಂತರ ತಡೆ ನೀಡಿದೆ. ಇದರಿಂದ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 

ಈ ಕುರಿತು ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶುಕ್ರವಾರ ಈ ಆದೇಶ ನೀಡಿದೆ. 

ಡಿಕೆಶಿ ಪರ ವಾದಿಸಿದ ಹಿರಿಯ ವಕೀಲ ಸಿ.ಎಚ್.ಜಾಧವ್ ಅವರು, ಅರ್ಜಿದಾರರು ಸಾರ್ವಜನಿಕ ಸೇವಕರಿದ್ದು ಅವರ ಕುಟುಂಬದ ಸದಸ್ಯರನ್ನೂ ಈ ಕೇಸ್‌ನಲ್ಲಿ ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. 

ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ರಾಜ್ಯ ವಿಧಾನಸಭೆಯ ಚುನಾವಣೆ ಹತ್ತಿರದಲ್ಲಿದೆ. ಈ ಕಾರಣಕ್ಕಾಗಿಯೇ ಅವರಿಗೆ ದಿನಂಪ್ರತಿ ಕಿರುಕುಳ ನೀಡಲಾಗುತ್ತಿದ್ದು ಅವರ ವಿರುದ್ಧ ರಾಜಕೀಯ ಪಿತೂರಿ ಹೆಣೆಯಲಾಗಿದೆ ಎಂದು ತಿಳಿಸಿದರು.

ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಅವರು, ಅರ್ಜಿದಾರರ ಪರ ಹಿರಿಯ ವಕೀಲ ಜಾಧವ್ ಅವರ ವಾದವನ್ನು ನಿರಾಕರಿಸಿದರಾದರೂ ಕೋರ್ಟ್ ಒಪ್ಪಲಿಲ್ಲ. ಅಂತೆಯೇ, ತನಿಖೆಯ ಪ್ರಗತಿ ವರದಿಯನ್ನು ಕೋರ್ಟ್ ಗೆ ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು.

ಏನಿದು ಪ್ರಕರಣ: ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅ.3ರಂದು ಪ್ರಕರಣ ದಾಖಲಿಸಿದೆ. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ನನ್ನ ವಿರುದ್ಧ 40 ಕೇಸ್ ಇದೆ: ಡಿಕೆಶಿ 

ತಮ್ಮ ವಿರುದ್ಧದ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಅವರು, ನನ್ನ ವಿರುದ್ಧ 40 ಕೇಸ್ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಯಾವುದು ಎಂದು ವಕೀಲರ ಜೊತೆಗೆ ಮಾತನಾಡುತ್ತೇನೆ. ಕೇಸ್‌ನ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು ಬಹಳ ಸಂತೋಷವಾಗಿದೆ. ಕೋರ್ಟ್ ಮೇಲೆ, ನ್ಯಾಯದ ಮೇಲೆ ನನಗೆ ನಂಬಿಕೆ ಇದೆ ಎಂದರು.

Similar News