ರಾಜ್ಯದಲ್ಲಿ 22 ಲಕ್ಷ ರೈತರಿಗೆ 16,500 ಕೋಟಿ ರೂ. ಸಾಲ ವಿತರಣೆ: ಸಚಿವ ಸೋಮಶೇಖರ್

Update: 2023-02-11 16:49 GMT

ಮಂಗಳೂರು, ಫೆ.11: ರಾಜ್ಯ ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಘಗಳ ಮೂಲಕ 22 ಲಕ್ಷ ರೈತರಿಗೆ ಕಳೆದ ಜನವರಿ ಅಂತ್ಯದ ವೇಳೆಗೆ 16,500 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಶನಿವಾರ ಪ್ರಗತಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಮುಂದಿನ ಮಾರ್ಚ್ ಅಂತ್ಯದ ವೇಳೆಗೆ ನಿಗದಿತ ಗುರಿ ಸಾಧಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ 14 ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಿಗೆ ಸ್ವತ: ತಾನು ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‌ಗಳಿಗೆ ಗುರಿ ನಿಗದಿಪಡಿಲಾಗಿದೆ. ಅರ್ಹ ರೈತರಿಗೆ ಸಾಲ ವಿತರಣೆಯಲ್ಲಿ ಯಾವುದೇ ತಾರತಮ್ಯ ನಡೆಯದಂತೆ ಎಚ್ಚರವಹಿಸಲಾಗಿದೆ ಎಂದು ಹೇಳಿದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 2024 ಕೋಟಿ ರೂ. ಸಾಲ ವಿತರಣೆ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವ್ಯಾಪ್ತಿಯಲ್ಲಿ 2,024 ಕೋಟಿ ರೂ. ಸಾಲ ವಿತರಿಸಲಾಗಿದೆ. 1.74 ಲಕ್ಷ ರೈತರಿಗೆ 2, 300 ಕೋಟಿ ರೂ. ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ ಅಂತ್ಯದ ವೇಳೆಗೆ ನಿಗದಿತ ಗುರಿ ತಲುವ ಬಗ್ಗೆ ಬ್ಯಾಂಕಿನ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವ ಸೋಮಶೇಖರ್ ಹೇಳಿದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಸಚಿವರು ಶ್ಲಾಘಿಸಿದ ಅವರು, ರಾಜ್ಯದ 6 ಸಾವಿರಕ್ಕೂ ಅಧಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ಗಳಿಗೆ 191 ಕೋಟಿ ರೂ.ವೆಚ್ಚದಲ್ಲಿ ಏಕರೂಪದ ತಂತ್ರಾಂಶ ಅಳವಡಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಯಶಸ್ವಿನಿ’ ಆರೋಗ್ಯ ಯೋಜನೆ ಜಾರಿಯಾಗಿದ್ದು, ಫೆಬ್ರವರಿ ಅಂತ್ಯದವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಬ್ಯಾಂಕಿನ ಅಧ್ಯಕ್ಷ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸನ್ಮಾನಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಜಿ.ಉಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್ ಉಪಸ್ಥಿತರಿದ್ದರು.

Similar News