ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, 'ಕೈ' ಅಧಿಕಾರದಲ್ಲಿದ್ದರೆ ಚೆಂದ: ಮದ್ದೂರಿನಲ್ಲಿ ಡಿಕೆಶಿ
ಮಂಡ್ಯ, ಫೆ.11: ಮುಂದೆ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯ ಹಾಗೂ ರಾಷ್ಟ್ರ ಕಾಪಾಡಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಮಾಡುತ್ತಿರುವುದೇ ನಿಮ್ಮ ನೋವು, ಸಂಕಷ್ಟಕ್ಕೆ ಪರಿಹಾರ ನೀಡಲು. ಬದಲಾವಣೆಗಾಗಿ, ಭ್ರಷ್ಟ ಆಡಳಿತ ತೆಗೆಯಲು ನೀವು ಪಣ ತೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಹೀಗಾಗಿ ಕಾಂಗ್ರೆಸ್ ಪಕ್ಷದ ಹಸ್ತಕ್ಕೆ ಮತ ಹಾಕಿ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ. ನಮ್ಮ ಪಕ್ಷದ ಸರಕಾರ ಎಲ್ಲ ವರ್ಗದ ಜನರಿಗೂ ನೆರವಾಗುವ ಕಾರ್ಯಕ್ರಮ ಕೊಟ್ಟಿದೆ. ಇಂತಹ ಯಾವುದಾದರೂ ಒಂದು ಯೋಜನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಸರಕಾರ ನೀಡಿದೆಯೇ? ಎಂದು ಅವರು ಪ್ರಶ್ನಿಸಿದರು.
ಅಚ್ಛೇದಿನ ನೀಡುತ್ತೇವೆ, ನಿಮ್ಮ ಆದಾಯ ಡಬಲ್ ಮಾಡುತ್ತೇವೆ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ, ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಮೋದಿ ಎಂದಿದ್ದರು. ಆದರೆ, ಈ ಭರವಸೆಗಳನ್ನು ಈಡೇರಿಸಿದ್ದಾರಾ? ಎಂದು ಅವರು ವಾಗ್ದಾಳಿ ನಡೆಸಿದರು.
ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಉಚಿತವಾಗಿ 200 ಯುನಿಟ್ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡುತ್ತೇವೆ. ಪಡಿತರದಾರರಿಗೆ ನೀಡಲಾಗುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಕೆ ಮಾಡುತ್ತೇವೆ. ಮೇ ತಿಂಗಳಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬರಲಿದ್ದು, ಜೂನ್ ತಿಂಗಳಿಂದ ಈ ಯೋಜನೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ನಾವು ಯೋಜನೆ ಜಾರಿ ಮಾಡದಿದ್ದರೆ ನಾನು ಮತ್ತೆ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಸ್ ನಾಯಕರಾದ ಧ್ರುವನಾರಾಯಣ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಗೌಡ, ಮಲ್ಲಾಜಮ್ಮ, ದೇಶಹಳ್ಳಿ ಮೋಹನ್‍ಕುಮಾರ್, ಸುರೇಶ್ ಕಂಠಿ, ಕೆ.ಕೆ.ರಾಧಾಕೃಷ್ಣ, ಅಮರಾವತಿ ಚಂದ್ರಶೇಖರ್, ಎಸ್.ಗುರುಚರಣ್, ಇತರೆ ಮುಖಂಡರು ಉಪಸ್ಥಿತರಿದ್ದರು.
“ಮಂಡ್ಯದಲ್ಲಿ ಕಾಂಗ್ರೆಸ್‍ನಿಂದ ಯಾರೇ ನಿಂತರೂ, ಡಿ.ಕೆ.ಶಿವಕುಮಾರೇ ಅಭ್ಯರ್ಥಿ. ನನಗೆ ಮಂಡ್ಯ, ರಾಮನಗರ ಹಾಗೂ ಕನಕಪುರ ಒಂದೇ. ಎರಡು ಬಾರಿ ಜಿಲ್ಲಾ ಮಂತ್ರಿಯಾಗಿ ಈ ಜಿಲ್ಲೆಯ ನಾಡಿ ಮಿಡಿತ ಗೊತ್ತಿದೆ. ನಾನು ಕೂಡ ಈ ಮಣ್ಣಿನ ಮಗ. ನನಗೆ ರಾಜಕೀಯವಾಗಿ ಶಕ್ತಿ ನೀಡಬೇಕು. ನನ್ನ ಕೈ ಬಲಪಡಿಸಬೇಕು. ನಿಮ್ಮ ಮಗನ ಆಡಳಿತ ನೋಡಬೇಕು ಎನ್ನುವುದಾದರೆ ನನಗೆ ಆಶೀರ್ವಾದ ಮಾಡಿ.”
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ.